

ಕೆ.ಆರ್.ನಗರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ನಿತ್ಯ ಬರುವ ಒಳ ಮತ್ತು ಹೊರ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಆಸ್ಪತ್ರೆ ಮುಂಭಾಗ ಕಾಂಕ್ರಿಟೀಕರಣ ಮಾಡುವುದರ ಜತೆಗೆ ಇತರ ಅಗತ್ಯ ಕಾಮಗಾರಿ ಮಾಡಲು ಸರ್ಕಾರದಿಂದ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯಾದ್ಯಂತ ಡೆಂಘೆ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಇದರ ತಡೆಗೆ ಸಾಧ್ಯವಿರುವ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ವೈದ್ಯರಿಗೆ ತಾಕೀತು ಮಾಡಿದ ಅವರು, ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು.
ಶಾಸಕರು ರಕ್ಷಾ ಸಮಿತಿಯ ಸದಸ್ಯರ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಇಲ್ಲಿನ ಸಮಸ್ಯೆಗಳನ್ನು ಆಲಿಸಿ ನನ್ನ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಆಸ್ಪತ್ರೆಗೆ ಬರುವ ರೋಗಿಗಳ ಸಹಾಯಕರು ಮತ್ತು ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ, ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ರೋಗಿಗಳ ನೋಂದಣಿ ಕೌಂಟರ್ ಬದಲಾಯಿಸಿ ಬೇರೆಡೆಗೆ ಸ್ಥಳಾಂತರಿಸುವಂತೆ ಆದೇಶಿಸಿದರು. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರಿಂದ ನನಗೆ ಯಾವುದೇ ದೂರುಗಳು ಬಾರದಂತೆ ಆಡಳಿತಾಧಿಕಾರಿಗಳು ಮತ್ತು ವೈದ್ಯರು ಕೆಲಸ ನಿರ್ವಹಿಸಬೇಕು. ಜನರಿಗೆ ಅನುಕೂಲ ಕಲ್ಪಿಸಲು ನಾನು ಸರ್ಕಾರದಿಂದ ಬೇಕಾದಷ್ಟು ಅನುದಾನ ತರುತ್ತೇನೆ. ನೀವು ಅದರ ಸದ್ಬಳಕೆ ಮಾಡಬೇಕು ಎಂದು ತಾಕೀತು ಮಾಡಿದರು.
ಚಿಕಿತ್ಸೆಗೆ ಬರುವ ರೋಗಿಗಳನ್ನು ಅನಗತ್ಯವಾಗಿ ಕಾಯಿಸದೆ ಸಕಾಲದಲ್ಲಿ ಉತ್ತಮ ಮತ್ತು ಅಗತ್ಯ ಚಿಕಿತ್ಸೆ ನೀಡಬೇಕು. ಶಾಸಕರು ವೈದ್ಯರು ಹೃದಯ ವೈಶಾಲ್ಯತೆ ಹಾಗೂ ಅಂತಃಕರಣದಿಂದ ಸೇವೆ ನೀಡಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಬಿ.ಜೆ.ನವೀನ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ವೈದ್ಯ ಡಾ.ದರ್ಶನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಎಚ್.ಎಚ್.ನಾಗೇಂದ್ರ, ಲೋಕೇಶ್, ಕೆಂಚಿ ಮಂಜು, ನಾಗರತ್ನಮ್ಮ, ಸಾಗರ್ ಸೇರಿದಂತೆ ಆಸ್ಪತ್ರೆ ವೈದ್ಯರು ಉಪಸ್ಥಿತರಿದ್ದರು.