ಪ್ರಜಾಪ್ರಭುತ್ವದ ರಕ್ಷಣೆಗೆ ಅಧಿಕಾರ ಬಳಕೆಯಾಗಲಿ

rudregowda
rudregowda
Published on

ಶಿವಮೊಗ್ಗ: ಪ್ರಜಾಪ್ರಭುತ್ವ ಎಂಬುದು ಒಂದು ಆಡಳಿತ ವ್ಯವಸ್ಥೆ ಮಾತ್ರವಲ್ಲ. ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಜಿಲ್ಲಾಡಳಿತದಿಂದ ಸೋಮವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು. ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರೃ, ಕಲಿತ ಮೌಲ್ಯ, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸಬೇಕಾದ ಅಗತ್ಯವಿದೆ ಎಂದರು.

ಇಂದು ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ನಗರಾಭಿವೃದ್ಧಿ ಮತ್ತಿತರ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ಡಿಸಿ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶಕ್ಕೆ ಭವ್ಯ ಇತಿಹಾಸವಿದೆ. ಪ್ರಜಾಪ್ರಭುತ್ವದ ಭದ್ರಬುನಾದಿ ಮೇಲೆ ದೇಶದ ಭವಿಷ್ಯ ನಿಂತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಹಕ್ಕುಗಳನ್ನು ಬಳಸಿಕೊಳ್ಳುವಂತೆಯೇ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಮರ್ಥ ಜನನಾಯಕನನ್ನು ಆಯ್ಕೆಮಾಡಲು ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತ ಚಲಾಯಿಸದವರಿಗೆ ಸರ್ಕಾರದ ಯಾವುದೇ ಸೌಲಭ್ಯ ನೀಡದಿರುವ ಕಾನೂನು ಜಾರಿಯಾಗಬೇಕು ಎಂದರು.

ಜನರಿಂದ ಜನರಿಗಾಗಿ ಜನರಿಗೋಸ್ಕರವೇ ನಿರ್ಮಾಣಗೊಂಡ ಸಂವಿಧಾನ ವ್ಯವಸ್ಥೆ ಹೊಂದಿರುವ ಭಾರತದ ಬೆಳವಣಿಗೆಯ ವೇಗ ಅಸಾಧಾರಣ. ದೇಶದ ಬೆಳವಣಿಗೆ ಪಾರದರ್ಶಕವಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ಭುತವಾದ ಬದಲಾವಣೆಗಳಾಗಿವೆ. ತಂತ್ರಜ್ಞಾನ ಕ್ಷೇತ್ರದ ಉನ್ನತಿಗೆ ಭಾರತದ ಕೊಡುಗೆ ಅಪಾರ ಎಂದರು.

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಮಾತನಾಡಿ, ವಿವಿಧತೆಯಲ್ಲಿ ಏಕತೆ ಕಾಣುವ ಭಾರತ ದೇಶದ ಬೆಳವಣಿಗೆಯನ್ನು ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಇದುವೇ ಭಾರತದ ಸುವರ್ಣಕಾಲ ಎಂದು ಹೇಳಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲೆ, ಚರ್ಚಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಎಂಎಲ್‌ಸಿ ಬಲ್ಕಿಷ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net