

ಶಿವಮೊಗ್ಗ: ಸಹಕಾರ ಕ್ಷೇತ್ರ ಹೆಮ್ಮರವಾಗಿ ಬೆಳೆಯುತ್ತಿದೆ. ಭಾರತ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ನಿಟ್ಟಿನಲ್ಲಿ ಸಹಕಾರ ವಲಯ ಪ್ರಮುಖ ಪಾತ್ರವಹಿಸಲಿದೆ. ಆ ಮೂಲಕ ಸಹಕಾರ ರಂಗ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವತ್ತ ಸಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಇಡೀ ದೇಶದಲ್ಲೇ ಸಹಕಾರ ಕ್ರಾಂತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಯುವಕರು ಸಹಕಾರ ಕ್ಷೇತ್ರದಲ್ಲಿ ಭಾಗಿಯಾಗಬೇಕು. ಧ್ವನಿ ಇಲ್ಲದವರ ಸ್ಪಂದಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪಾಲಿನ ಷೇರು ಹಣವನ್ನು ಸರ್ಕಾರವೇ ಭರಿಸುತ್ತದೆ. ಸಹಕಾರಿಗಳಲ್ಲಿ ಸಮಾಜಮುಖಿ ಭಾವನೆ ಇರಬೇಕು. ಆರ್ಥಿಕ ಚಟುವಟಿಕೆ ಹೆಚ್ಚಾಗಬೇಕು. ಕೃಷಿಯ ಜತೆಗೆ ಹೈನುಗಾರಿಕೆ ಮುಂತಾದ ಉಪ ಕಸುಬುಗಳು ಅಭಿವೃದ್ಧಿಗೆ ಪ್ರೇರಕವಾಗುತ್ತವೆ ಎಂದರು.
ಸಹಕಾರ ಸಂಸ್ಥೆಗಳಿಂದ ಪಡೆದ ಸಾಲ ಅದು ಸರ್ಕಾರದ ಹಣವಲ್ಲ, ಠೇವಣಿ ಹಣ. ಸಾಲ ಮರುಪಾವತಿಗೆ ಉದಾಸೀನ ಮಾಡಬಾರದು. ಮುಜರಾಯಿ ದೇವಸ್ಥಾನಗಳು ಮತ್ತು ಎಪಿಎಂಸಿಯಂತಹ ಸಂಸ್ಥೆಗಳು ತಮ್ಮಲ್ಲಿ ಸಂಗ್ರಹವಾದ ಹಣವನ್ನು ಡಿಸಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸುವ ಮೂಲಕ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು.
ಸಾಂಖ್ಯಿಕ ಸಚಿವ ಡಿ.ಸುಧಾಕರ್ ಸಹಕಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ರತ್ನಾಕರ್, ಶಿಮುಲ್ ಅಧ್ಯಕ್ಷ ಎನ್.ಎಚ್.ಶ್ರೀಪಾದ ರಾವ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಸಹಕಾರ ಸಂಘಗಳ ನಿಬಂಧಕ ಡಾ. ಕೆ.ರಾಜೇಂದ್ರ, ಡಿಸಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಇತರರಿದ್ದರು.