

ಮೈಸೂರು : ರಾಜ್ಯದ ಕಾವೇರಿ ಅಚ್ಚುಕಟ್ಟು ಪ್ರದೇಶದ ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ ನಂತರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಕುರಿತು ಎಲ್ಲ ಪಕ್ಷಗಳು ರಾಜಕೀಯೇತರ ನಿಲುವು ಕೈಗೊಂಡು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಕೃಷ್ಣಪ್ಪಗೌಡ ಅವರು, ಪ್ರಸ್ತುತ ಕೆಆರ್‌ಎಸ್ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ರಾಜ್ಯಕ್ಕೆ ಅಗತ್ಯವಿರುವಷ್ಟು ಬಳಕೆ ಮಾಡಿಕೊಂಡು ನಂತರ ತಮಿಳುನಾಡಿಗೆ ಹರಿಸಬೇಕು. ಈ ಸಂಬಂಧ ಎಲ್ಲ ಪಕ್ಷಗಳು ರಾಜಕೀಯ ಮರೆತು ಒಗ್ಗಟ್ಟು ಪ್ರದರ್ಶಿಸುವ ಮೂಲಕ ರಾಜ್ಯದ ಹಿತ ಕಾಯಬೇಕು ಎಂದು ಒತ್ತಾಯಿಸಿದ್ದಾರೆ.
ಕೆಆರ್‌ಎಸ್ ಜಲಾಶಯದ ನಿರ್ವಹಣಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ತಮಿಳುನಾಡಿಗೆ ನೀರು ಹಂಚಿಕೆ ಮಾಡುತ್ತಿರುವುದರಿಂದ ತಮಿಳುನಾಡು ಸರ್ಕಾರ ಕೂಡ ಶೇ.50ರಷ್ಟು ನಿರ್ವಹಣಾ ವೆಚ್ಚವನ್ನು ಭರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿ ಎಂದು ಸಲಹೆ ನೀಡಿದ್ದಾರೆ.