

ಬೆಂಗಳೂರು: ರಾಜ್ಯದ ಕಲ್ಯಾಣ ಕರ್ನಾಟಕ ಪ್ರಾಥಮಿಕ ಪ್ರಾಂತ ಹೊರತುಪಡಿಸಿ ಉಳಿದ ಎ್ಲ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ಕೆಜಿ, ಯುಕೆಜಿ) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.
ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೂ ಸಮ್ಮತಿ ಲಭಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಹೊರತಾಗಿ ಉಳಿದ ಅಂಗನವಾಡಿ ಕೇಂದ್ರಗಳಲ್ಲೇ ಹೊಸದಾಗಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಿಕ್ಷಣ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ.
ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಕ್ಕಳಿಗೆ ಇಲಾಖೆ ಮೂಲಕ ಸಮವಸ್ತ್ರ, ಪುಸ್ತಕ, ಬ್ಯಾಗ್ ವಿತರಣೆ, ಶಾಲೆಗಳ ಮಾದರಿಯಲ್ಲಿ ವರ್ಗಾವಣೆ ಪತ್ರ (ಟಿಸಿ) ನೀಡಲು ನಿರ್ಧರಿಸಲಾಗಿದೆ.
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಬೇಕೆಂಬ ಕಳಕಳಿಯಿಂ ಮಾಂಟೆಸರಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಆದರೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಅಂಗನವಾಡಿ ಕಾರ್ಯಕರ್ತರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಹಾಲಿ ಕಾರ್ಯಕರ್ತೆಯರ ಪೈಕಿ ಒಂಭತ್ತು ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದವರಿದ್ದಾರೆ.
ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆಯಾಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಸಭೆಯಲ್ಲಿ ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳು ಇದ್ದರು.