

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಅವಧಿಯನ್ನು ಇನ್ನು ಒಂದು ವಾರ ಕಾಲ ವಿಸ್ತರಣೆ ಮಾಡಲಾಗಿದೆ.
ಈ ವಿಚಾರವಾಗಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ರಾಜ್ಯದ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಕರೊನಾ ತನ್ನ ಭೀಕರತೆಯನ್ನು ತೋರಿಸುತ್ತಿದೆ. ಶೇ. 36-37 ಪಾಸಿಟಿವಿಟಿ ದರ ಕಾಣಿಸಿಕೊಳ್ಳುತ್ತಿದೆ. ಲಾಕ್ಡೌನ್ ವಿಸ್ತರಣೆ ಮಾಡಬೇಕೆಂದು ಜನರೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಏಪ್ರಿಲ್ 26ಕ್ಕೆ ಮುಗಿಯಲಿರುವ ಲಾಕ್ಡೌನ್ನನ್ನು ಇನ್ನು ಒಂದು ವಾರದ ಕಾಲ (ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ) ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಪ್ರತಿದಿನ 20 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕರೊನಾ ಸೋಂಕು ದೃಢವಾಗುತ್ತಿದೆ. ಬಹುತೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದೆ. ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಜನರು ಸಾವನ್ನಪ್ಪುತ್ತಿರುವುದು ವರದಿಯಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ನಿಮ್ಮಲ್ಲಿರುವ ಹೆಚ್ಚುವರಿ ಆಕ್ಸಿಜನ್ ಅನ್ನು ನಮಗೆ ನೀಡಿ ಎಂದು ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು. (ಏಜೆನ್ಸೀಸ್)