ಜು.12ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್

Lok Adalat meeting
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಲೋಕ್ ಅದಾಲತ್ ನಡೆಸುವ ಬಗ್ಗೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು, ಅಧಿಕಾರಿಗಳು, ಅಭಿಯೋಜಕರು, ವಿಮಾ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎಂ.ಎಸ್. ಸಂತೋಷ್, ರಾಘವೇಂದ್ರ, ಪ್ರಸನ್ನಕೃಷ್ಣ ಪಟಗಾರ ಇದ್ದರು.
Published on

ಶಿವಮೊಗ್ಗ: ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಅನ್ನು ಜುಲೈ 12ರಂದು ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕುರಿತು ಚರ್ಚಿಸಲು ಗುರುವಾರ ನ್ಯಾಯಾಧೀಶರು, ಅಧಿಕಾರಿಗಳು, ಅಭಿಯೋಜಕರು, ವಿಮಾ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣ ಸೇರಿ ರಾಜೀಯಾಗಬಹುದಾದ ಸಿವಿಲ್, ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು ಎಂದರು.

ಬ್ಯಾಂಕ್‌ಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು. ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಈ ಬಾರಿ ಸಾಥಿ ಅಭಿಯಾನದಡಿ ಪರಿತ್ಯಕ್ತ, ಪೋಷಕರಿಲ್ಲದ ಮಕ್ಕಳಿಗೆ ಆಧಾರ್ ಮಾಡಿಸಲಾಗುತ್ತಿದ್ದು, ಅದಕ್ಕೆ ಅಗತ್ಯವಾದ ಜನನ ಪ್ರಮಾಣಪತ್ರವನ್ನು ಪಾಲಿಕೆಯವರು ಮಾಡಿಕೊಡಬೇಕೆಂದರು.

2024ರ ಡಿ.14ರಂದು ನಡೆದ ಅದಾಲತ್‌ನಲ್ಲಿ 13,393, 2025ರ ಮಾ.8ರ ಅದಾಲತ್‌ನಲ್ಲಿ 13,808 ವಿಲೇವಾರಿ ಆಗಿವೆ. ಜು.12ರಂದು ನಡೆಯುವ ಅದಾಲತ್‌ಗೆ 14,014 ಪ್ರಕರಣ ಗುರುತಿಸಲಾಗಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ, ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ, ಸರ್ಕಾರಿ ಅಭಿಯೋಜಕರು, ವಿಮಾ ಕಂಪೆನಿ ಅಧಿಕಾರಿಗಳು, ಅಬಕಾರಿ, ಅರಣ್ಯ, ಮೆಸ್ಕಾಂ, ಬ್ಯಾಂಕ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net