ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

Ajith Kumar Rai
ಅಜಿತ್ ಕುಮಾರ್ ರೈ
Published on

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈರನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಜೂ.29) ಬಂಧಿಸಿದ್ದಾರೆ. ಎರಡು ದಿನಗಳ ಕಾಲ ತಹಶೀಲ್ದಾರ್ ಮನೆ, ಕಚೇರಿ ಮೇಲೆ ದಾಳಿ ಮಾಡಿ ನಿರಂತರ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಜಿತ್ ರೈರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.

ಅಜಿತ್​ ರೈಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್‌ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದು, ಎಲ್ಲ ಕಾರಿಗೂ ಒಂದೇ ನಂಬರ್ ರಿಜಿಸ್ಟರ್ ಇದೆ. ಆದರೆ ಇದ್ಯಾವುದಕ್ಕೂ ಅಜಿತ್​ ರೈ ಲೆಕ್ಕ ಕೊಡುತ್ತಿಲ್ಲ ಎನ್ನಲಾಗಿದೆ.

ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ. ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net