ಡಿಸೆಂಬರ್‌ನಲ್ಲಿ ರಾಜ್ಯಾದ್ಯಂತ ಸಮಾವೇಶ: ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಮಾಹಿತಿ

11_11_Mdy_01(Madhu Bangarappa)
Published on

ಮಂಡ್ಯ: ಡಿಸೆಂಬರ್‌ನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.

ಹಿಂದುಳಿದ ವರ್ಗದ ಸಮುದಾಯವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆ ಉಪಾಧ್ಯಕ್ಷನಾಗಿಯೂ ನನ್ನನ್ನು ಪಕ್ಷ ನೇಮಿಸಿದ್ದು, ಪ್ರಣಾಳಿಕೆಯ ಸಿದ್ಧತೆಗಳು ನಡೆಯುತ್ತಿವೆ. ಅದರಲ್ಲಿ ಹಿಂದುಳಿದ ವರ್ಗಗಳಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಸೇರಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ ಪ್ರಸ್ತುತ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದು ಏನು ಮಾಡಿದೆ ಎಂದು ಪ್ರಶ್ನಿಸಿದರು.

ಪ್ರತಿಮೆ ನಿರ್ಮಾಣ ಮಾಡುವುದೇ ಬಿಜೆಪಿ ದೊಡ್ಡ ಸಾಧನೆ ಅಂದುಕೊಂಡಿದೆ. ಬಿಜೆಪಿಗೆ ಬಡವರ ಬಗ್ಗೆ ಚಿಂತನೆ ಇಲ್ಲ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಜನತೆಗೆ ಏನು ಮಾಡಿದೆ? ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಂದು ಸಿಲಿಂಡರ್ ಬೆಲೆ 450 ರಿಂದ 500 ರೂ. ಇತ್ತು. ಬಿಜೆಪಿ ಸರ್ಕಾರದಲ್ಲಿ 1100 ರೂ. ಆಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸರ್ಕಾರದ ಸಾಧನೆ ಎಂದು ವ್ಯಂಗ್ಯವಾಡಿದರು.

450 ರಿಂದ 500 ರೂ. ಇದ್ದ ರಸಗೊಬ್ಬರದ ಬೆಲೆ 1800 ರೂ. ಆಗಿದೆ. ಹೀಗಾದರೆ ರೈತರು ಕೃಷಿ ಮಾಡುವುದಾದರೂ ಹೇಗೆ? ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಂಪನಿಗೆ ವಹಿಸಲು ಸರ್ಕಾರ ಮುಂದಾಗಿದೆ. ಖಾಸಗಿಯವರು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುತ್ತಾರೆ. ಆಗ ರೈತರು ಎಲ್ಲಿಂದ ಶುಲ್ಕ ಕಟ್ಟುತ್ತಾರೆ? ರೈತರು ಹಾಗೂ ಬಡವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಇದರಿಂದ ಪಕ್ಷಕ್ಕೆ ಶಕ್ತಿ ಬಂದಿದೆ ಎಂದು ಅಭಿಪ್ರಾಯಪಟ್ಟರು.

‘ಹಿಂದು’ ಪದ ಕುರಿತ ಶಾಸಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅವರು ಹಿಂದು ಪದದ ಬಗ್ಗೆ ಚರ್ಚೆಯಾಗಬೇಕು ಎಂದಿದ್ದಾರೆ. ಈ ಬಗ್ಗೆ ಈಗಾಗಲೇ ಪಕ್ಷದ ಮುಖಂಡ ಸುರ್ಜೆವಾಲ ಪ್ರತಿಕ್ರಿಯಿಸಿದ್ದಾರೆ. ಆದ್ದರಿಂದ ಆ ಕುರಿತು ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಜಾತಿ-ಧರ್ಮದ ಮೇಲೆ ರಾಜಕಾರಣ ನಡೆಯುತ್ತಿದ್ದು, ಅದು ತೊಲಗಬೇಕು. ಯಾವೊಬ್ಬ ವ್ಯಕ್ತಿಯೂ ಇಂತಹುದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡಿರುವುದಿಲ್ಲ. ಹಾಗಾಗಿ, ಹಿಂದುಳಿದ ವರ್ಗದ ಕಟ್ಟಕಡೆಯ ವ್ಯಕ್ತಿಯನ್ನೂ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬುದಷ್ಟೇ ನಮ್ಮ ಉದ್ದೇಶ ಎಂದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಹಾಲಹಳ್ಳಿ ರಾಮಲಿಂಗಯ್ಯ, ಸುಂಡಹಳ್ಳಿ ಮಂಜುನಾಥ್, ನಾಗರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net