ಮಹಾಕಾಲ ದೇವಾಲಯದ ಸಮೀಪವೇ ಮಹಾ ಪಾತಕಿ ದುಬೆ ಅರೆಸ್ಟ್‌!

vikas dubai
Published on

ಕಾನ್ಪುರ: ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ, ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ವಿಕಾಸ್‌ ದುಬೆ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

ಮಧ್ಯಪ್ರದೇಶದ ಉಜ್ಜೈನ್‌ನಲ್ಲಿ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಈತ ಸಿಕ್ಕಿಬಿದ್ದುದು ದೇವಸ್ಥಾನಕ್ಕೆ ಹೋಗಿ ಬರುತ್ತಿರುವಾಗ ಈ ಖದೀಮನನ್ನು ಬಂಧಿಸಲಾಗಿದೆ. ಉಜ್ಜೈನಿಯ ಮಹಾಕಾಳ ದೇವಾಲಯದಲ್ಲಿ ಈತ ಹೋಗಿದ್ದಾಗ ಬಂಧಿಸಲಾಗಿದೆ.

ಇಂದು ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದ. ಅಲ್ಲಿಯ ಭದ್ರತಾ ಸಿಬ್ಬಂದಿ ಈತನನ್ನು ಗುರುತಿಸಿ ಗುಟ್ಟಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಈತನನ್ನು ಹಿಡಿದುಕೊಟ್ಟವರಿಗೆ ಅಥವಾ ಸುಳಿವು ನೀಡಿದವರಿ ಐದು ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಲಾಗಿತ್ತು.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

ಪೊಲೀಸರಿಂದಲೇ ಈ ಮೊದಲು ವಶಪಡಿಸಿಕೊಂಡಿದ್ದ ಶಸ್ತ್ರಾಸ್ತ್ರಗಳನ್ನು ಬಳಸಿ ಈತ ಪೊಲೀಸರ ಮೇಲೆ ದಾಳಿ ಮಾಡುತ್ತಿದ್ದ. ಈಗಾಗಲೇ ಈತನ ಸಹಚರರಾಗಿರುವ ಪ್ರೇಮ್ ಪ್ರಕಾಶ್ ಪಾಂಡೆ ಹಾಗೂ ಅತುಲ್ ದುಬೆ ಎಂಬ ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net