ಮೂರು ಬೇಡಿಕೆ ಮುಂದಿಟ್ಟು ಮಹಿಳಾ ಕಾಂಗ್ರೆಸ್ ಹೋರಾಟ

mahila
Published on

ಬೆಂಗಳೂರು: ಮಹಿಳಾ ಮೀಸಲಾತಿ ಕಾಯ್ದೆಯನ್ನು ತಕ್ಷಣವೇ ಜಾರಿಗೊಳಿಸಬೇಕು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ಕಾರಣಕ್ಕೆ ಪ್ರತಿ ಬಡ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 8,500 ರೂ. ಜಮಾ ಮಾಡಬೇಕು, ಮಹಿಳೆಯರಿಗೆ ಭದ್ರತೆಗಾಗಿ ಕಾನೂನು ಬಿಗಿಗೊಳಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪಾ ಅಮರನಾಥ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಬೇಡಿಕೆ ಮುಂದಿಟ್ಟುಕೊಂಡು ಜುಲೈ 29ರಂದು ದೆಹಲಿಯ ಜಂತರ್ ಮಂಥರ್‌ನಲ್ಲಿ ಹಕ್ಕೊತ್ತಾಯ ಚಳವಳಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮಹಿಳಾ ರಾಜಕೀಯ ಮೀಸಲಾತಿಯಲ್ಲಿ ಒಬಿಸಿ ಸಹೋದರಿಯರ ಮೀಸಲಾತಿ ಮತ್ತು ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿರುವ ಅವರು ದೇಶಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳು ನಿರಂತರವಾಗಿ ಹೆಚ್ಚಾಗುತ್ತಿವೆ ಮತ್ತು ಅಪರಾಧಿಗಳಲ್ಲಿ ಕಾನೂನಿನ ಭಯವು ಕ್ಷೀಣಿಸುತ್ತಿದೆ, ಇದಕ್ಕೆ ಮಹಿಳೆಯರ ಹಕ್ಕುಗಳನ್ನು ಕಾಪಾಡಲು ಮತ್ತು ಭದ್ರತೆಯನ್ನು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದೊಂದಿಗೆ ಹೋರಾಡುತ್ತಿರುವ ದೇಶದ ಅರ್ಧದಷ್ಟು ಜನಸಂಖ್ಯೆಗೆ ಪರಿಹಾರವನ್ನು ಒದಗಿಸಲು ಪ್ರತಿ ಬಡ ಕುಟುಂಬದ ಮಹಿಳೆಗೆ ವಾರ್ಷಿಕವಾಗಿ 1,00,000 ರೂ. ತಲುಪಿಸುವ ಕಾರ್ಯಕ್ರಮ ರೂಪಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net