

ಶಿವಮೊಗ್ಗ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು. ಬಾಲ ಕಾರ್ಮಿಕ ತಪಾಸಣೆ ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.
ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016ರ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಕ್ಕಳು ದುಡಿಯುತ್ತಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಂಡು ಮಕ್ಕಳು ಶಾಲೆಗೆ ಬರುವಂತೆ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಮಾತನಾಡಿ, ಗ್ಯಾರೇಜ್‌ಗಳು, ಕಟ್ಟಡ ನಿರ್ಮಾಣ, ಭಿಕ್ಷಾಟನೆ ಮತ್ತು ಬೇರೆ ಯಾವುದೇ ಕ್ಷೇತ್ರದಲ್ಲಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡರೆ ಅಥವಾ ಮಕ್ಕಳು ಕೆಲಸ ಮಾಡುತ್ತಿದ್ದರೆ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮಾತನಾಡಿ, ಬಾಲ್ಯವಿವಾಹ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಮಕ್ಕಳ ಮತ್ತು ಮಹಿಳೆಯರ ಸಾಗಣೆ ಬಗ್ಗೆ ಅತ್ಯಂತ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಗರದ ಶಿವಪ್ಪ ನಾಯಕ ವೃತ್ತದಿಂದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆವರೆಗೆ ಏರ್ಪಡಿಸಿದ್ದ ಅರಿವು ಜಾಥಾಕ್ಕೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಮತ್ತು ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಚಾಲನೆ ನೀಡಿದರು.
ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ರಘುನಾಥ, ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ದುರ್ಗಿಗುಡಿ ಶಾಲೆ ಮುಖ್ಯ ಶಿಕ್ಷಕ ಮೋಹನ್, ದೈಹಿಕ ಶಿಕ್ಷಣ ಶಿಕ್ಷಕ ನಿರಂಜನಮೂರ್ತಿ ಇತರರಿದ್ದರು.