ಮೇಕೆದಾಟು; ಡಿಸಿಎಂ ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

DKS-HDK
Supporters of Karnataka Congress Senior Leader DK Shivakumar celebrate by bursting crackers and greet him for his appointment as Karnataka Congress president at his residence in Sadashivnagar, in Bengaluru on Wednesday 11th March 2020 Pics: www.pics4news.com
Published on

ಬೆಂಗಳೂರು: ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಮೇಕೆದಾಟು ಮಾಡಲಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಡಿ.ಕೆ.ಶಿವಕುಮಾರ್ ಅವರೆ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಟಾಂಗ್ ಕೊಟ್ಟಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ? ಎಂದು ಕೆಣಕಿದ್ದಾರೆ.

ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರ್ಕಾರ. ಆ ಸರ್ಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಎಂದು ಟೀಕಿಸಿದ್ದಾರೆ.

2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, 100 ಕೋಟಿ ರೂ. ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್ ಸರ್ಕಾರ ಇತ್ತ್ಲ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ. 90ರ ಇಳಿವಯಸ್ಸಿನಲ್ಲಿಯೂ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು! ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು!

ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ’ಮೌನಂ ಶರಣಂ ಗಚ್ಛಾಮಿ!!’ ನಿಮ್ಮ ಸರ್ಕಾರದಲ್ಲಿ ಏನೇನು ನಡೀತಿದೆ ಶಿವಕುಮಾರ್ ಅವರೆ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ? ಎಂದು ಕುಮಾರಸ್ವಾಮಿ ಕೆಣಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net