

ಕೊಲ್ಕತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಮೊದಲಿನಿಂದಲೂ ಮರಣದಂಡನೆಗೆ ಒತ್ತಾಯಿಸುತ್ತಿದ್ದೇವೆ, ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ನನಗೆ ತೃಪ್ತಿ ಇಲ್ಲ ಎಂದಿದ್ದಾರೆ.
ತನಿಖೆ ಹೇಗೆ ನಡೆದಿದೆ ಎಂಬುದು ನಮಗೆ ಗೊತ್ತಿಲ್ಲ. ತನಿಖೆಯ ಜವಾಬ್ದಾರಿಯನ್ನು ಕೊಲ್ಕತಾ ಪೊಲೀಸರಿಂದ ಬಲವಂತವಾಗಿ ಕಸಿದುಕೊಳ್ಳಲಾಯಿತು. ರಾಜ್ಯ ಪೊಲೀಸರು ತನಿಖೆ ನಡೆಸಿದ ಅನೇಕ ರೀತಿಯ ಪ್ರಕರಣಗಳಲ್ಲಿ ಮರಣದಂಡನೆಯನ್ನು ಖಾತ್ರಿಪಡಿಸಲಾಗಿದೆ ಎಂದು ಹೇಳಿದರು.
ಶಿಕ್ಷೆಯನ್ನು ಪ್ರಕಟಿಸುವಾಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಇದು ಅಪರೂಪದ ಪ್ರಕರಣವಲ್ಲ ಎಂದು ಹೇಳಿ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಶಿಕ್ಷೆಯ ಜತೆಗೆ ಸಂಜಯ್ ರಾಯ್ಗೆ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.