

ಬೆಂಗಳೂರು: ರಾಜ್ಯ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ವೇಳೆ ಬೇರೆಯವರ ಕಡೆಯಿಂದ ಲಿಖಿತ ಮತ್ತು ದೈಹಿಕ ಪರೀಕ್ಷೆ ಬರೆಸಿ ಇಲಾಖೆಗೇ ಚಳ್ಳೆ ಹಣ್ಣು ತಿನ್ನಿಸಿ ಆಯ್ಕೆಯಾಗಿದ್ದ ಅಭ್ಯರ್ಥಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕು ವಡೇರಹಳ್ಳಿಯ ಸೋಮಲಿಂಗ ಜಮನಾಳ (25) ಬಂಧಿತ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಲ್ಲಿ ಖಾಲಿ ಇರುವ ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ದೈಹಿಕ ಮತ್ತು ಲಿಖಿತ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು. ಆಯ್ಕೆಯಾಗಿದ್ದ 76 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ ಏಪ್ರಿಲ್ 2ರಂದು ಸೋಮಲಿಂಗ ಜಮನಾಳ ಹಾಜರಾಗಿದ್ದ. ಈತನ ದಾಖಲೆ ಪರಿಶೀಲನೆ ವೇಳೆ ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗೆ ಹಾಜರಾಗಿದ್ದ ವ್ಯಕ್ತಿಗೂ ಸೋಮಲಿಂಗ ಮುಖ ಚಹರೆಗೂ ಹೋಲಿಕೆ ಆಗುತ್ತಿರಲಿಲ್ಲ.
ಅನುಮಾನ ಬಂದ ಹಿನ್ನೆಲೆಯಲ್ಲಿ ಆತನನ್ನು ಪ್ರಶ್ನಿಸಿದಾಗ ಬೇರೆಯವರ ಕಡೆಯಿಂದ ಪರೀಕ್ಷೆ ಬರೆದಿರುವ ಬಗ್ಗೆ ಅಭ್ಯರ್ಥಿ ತಪ್ಪೊಪ್ಪಿಕೊಂಡಿದ್ದಾನೆ. ಈ ಕುರಿತು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸಿಎಆರ್ ಕೇಂದ್ರ ವಿಭಾಗ ಎಸಿಪಿ ಎಚ್.ಎಂ. ಹರೀಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.