

ನೋನಿ (ಮಣಿಪುರ): ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಈವರೆಗೂ ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಮೃತ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಸೇನೆಯ ಪ್ರಕಾರ, ಪ್ರತಿಕೂಲ ಹವಾಮಾನ ಮತ್ತು ಪದೇ ಪದೇ ಭೂಕುಸಿತ ಸಂಭವಿಸುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ನಾಪತ್ತೆಯಾಗಿರುವ ಯೋಧರಿಗಾಗಿ ಶೋಧ ಕಾರ್ಯ ಇನ್ನೂ ಮುಂದುವರಿದಿದೆ.
ಈವರೆಗೂ 24 ಮಂದಿ ಮೃತಪಟ್ಟಿದ್ದು, ಇದರಲ್ಲಿ 18 ಸೇನಾ ಸಿಬ್ಬಂದಿ ಸೇರಿದ್ದಾರೆ. ಶನಿವಾರ ಬೆಳಗ್ಗೆ 13 ಮಂದಿಯನ್ನು ರಕ್ಷಿಸಲಾಗಿದೆ. ಇನ್ನು ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.
ಶುಕ್ರವಾರ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಎನ್.ಬೀರೇನ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇನಾ ಶಿಬಿರದ ಸಮೀಪ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ದಿಢೀರನೆ ಗುಡ್ಡ ಕುಸಿದು, ಭಾರತೀಯ ಸೇನೆಯ ಶಿಬಿರ ಧ್ವಂಸಗೊಂಡಿತು. (ಏಜೆನ್ಸೀಸ್)