

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ(Manipur Violence) ನಿಲ್ಲುವಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು ಶನಿವಾರ (ಅಕ್ಟೋಬರ್ 19) ಉಗ್ರರು ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೋರೂರು ಠಾಣೆ ಸುತ್ತಮುತ್ತಲಿನ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಉಗ್ರರು ಬಾಂಬ್‌ಗಳನ್ನು ಎಸೆದಿದ್ದಾರೆ. ಅಲ್ಲದೆ ದಾಳಿಯಲ್ಲಿ ಅತ್ಯಾಧುನಿಕ ಬಂದೂಕುಗಳು ಮತ್ತು ಬಾಂಬ್‌ಗಳನ್ನು ಬಳಸಲಾಗಿದೆ ಎಂದು ಅವರು ಹೇಳಿದರು. ಶಂಕಿತ ಉಗ್ರಗಾಮಿಗಳು ಮೂರು ಮೈಥೇಯಿ ಮನೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ
ಉಗ್ರರ ವಿರುದ್ಧ ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ನಂತರ ಇಬ್ಬರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿ ಹೇಳಿದರು. ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕಳುಹಿಸಲಾಗಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಜಿರಿಬಾಮ್ ಪಟ್ಟಣದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಬೊರೊಬೆಕ್ರಾವು ದಟ್ಟವಾದ ಕಾಡುಗಳು ಮತ್ತು ಗುಡ್ಡಗಾಡು ಪ್ರದೇಶಗಳಿಂದ ಆವೃತವಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಾತಿ ಹಿಂಸಾಚಾರ ಭುಗಿಲೆದ್ದ ನಂತರ ಈ ಭಾಗದಲ್ಲಿ ಇಂತಹ ಹಲವು ದಾಳಿಗಳು ನಡೆದಿವೆ. ಕೆಲವು ದಿನಗಳ ಹಿಂದೆಯಷ್ಟೇ ದೆಹಲಿಯಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯದ ಶಾಸಕರ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆದಿತ್ತು. ಈ ಸಭೆ ನಡೆದ ಕೆಲವೇ ದಿನಗಳಲ್ಲಿ ಈ ಹಿಂಸಾಚಾರದ ಘಟನೆ ನಡೆದಿದೆ.
ಇದಕ್ಕೂ ಮೊದಲು ಅಕ್ಟೋಬರ್ 17ರಂದು ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಟ್ರುಕ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ದಾಳಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಸಜ್ಜಿತ ದಾಳಿಕೋರರು ಕಾಂಗ್ಪೊಕ್ಪಿ ಜಿಲ್ಲೆಯ ಬೆಟ್ಟಗಳಿಂದ ಕೆಳ ಪ್ರದೇಶದ ಕೊಟ್ರುಕ್ ಗ್ರಾಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)