60 ಕ್ರೀಡಾಪಟುಗಳಿಗೆ ಮಾಸ್ಟರ್ ಟ್ರೈನಿಂಗ್

sports
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶನಿವಾರ ಮಧು ಬಂಗಾರಪ್ಪ ಚಾಲನೆ ನೀಡಿದರು. ಎಸ್.ಎನ್.ಚನ್ನಬಸಪ್ಪ, ಬಲ್ಕಿಶ್ ಬಾನು, ಸಿ.ಎಸ್.ಷಡಾಕ್ಷರಿ, ಆರ್.ಮೋಹನ್ ಕುಮಾರ್, ಗುರುದತ್ತ ಹೆಗಡೆ, ಜಿ.ಕೆ.ಮಿಥುನ್‌ಕುಮಾರ್ ಮುಂತಾದವರಿದ್ದರು.
Published on

ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಜಿಲ್ಲಾಡಳಿತದೊಂದಿಗೆ ರಾಜ್ಯ ಸರ್ಕಾರ ಇದಕ್ಕೆ ಎಲ್ಲ ಸಹಕಾರ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಯುರೋಪಿಯನ್ ಪ್ರೀಮಿಯರ್ ಲೀಗ್‌ನ ಸಹಕಾರದಲ್ಲಿ ರಾಜ್ಯದ ಸುಮಾರು 60 ಕ್ರೀಡಾಪಟುಗಳಿಗೆ ಮಾಸ್ಟರ್ ಟ್ರೈನಿಂಗ್ ನೀಡಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೂ ತರಬೇತಿ ನೀಡುವಂತೆ ಕೋರಲಾಗಿದೆ ಎಂದರು.

ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ. ದಿನನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುವ ನೌಕರರಲ್ಲಿನ ಸುಪ್ತ ಪ್ರತಿಭೆಯ ಅನಾವರಣ ಹಾಗೂ ಕೆಲಕ್ಷಣಗಳಾದರೂ ಒತ್ತಡದ ಬದುಕಿನಿಂದ ಹೊರಬರಲು ಈ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ ಖಾತೆ ತೆರೆದು, 1.20ಕೋಟಿ ರೂ. ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಈಗಾಗಲೇ ಸಂಘವು ಕೈಗೊಂಡ ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್ ನೇತೃತ್ವದಲ್ಲಿ ಸಮಿತಿ ರಚನೆಯಗಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ.ಮಿಥುನಕುಮಾರ್, ಜಿಪಂ ಸಿಇಒ ಎನ್.ಹೇಮಂತ್, ನಗರಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net