ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

mamatha
Published on

ಪಶ್ಚಿಮ ಬಂಗಾಳ:  ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಒತ್ತಾಯಿಸಿದೆ.

ಆಗಸ್ಟ್ 9 ರಂದು ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ದುಷ್ಕರ್ಮಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೂನಾವಾಲಾ ಅವರು ಐಎನ್‌ಡಿಐಎ ಬ್ಲಾಕ್ ಈ ಪ್ರಕರಣದಲ್ಲಿ ಏಕೆ ಮೌನಕ್ಕೆ ಶರಣಾಗಿದೆ? ಎಂದು ಪ್ರಶ್ನಿಸಿದರು.

ಪಶ್ಚಿಮ ಬಂಗಾಳದಲ್ಲಿ ಕಾನೂನಿನ ನಿಯಮವಿಲ್ಲ ಎಂದು ಆರೋಪಿಸಿದರು ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಕೃತ್ಯದ ಅಪರಾಧಿಗಳನ್ನು ಉಳಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅವರು ಮೃತ ಯುವತಿಗೆ ನ್ಯಾಯ ಕೊಡಿಸುವ ಬಗ್ಗೆ ಗಮನಹರಿಸುತ್ತಿಲ್ಲ. ಆರೋಪಿಗಳು ಈ ಪ್ರಕರಣದಲ್ಲಿ ಟಿಎಂಸಿ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು. ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು ಎಂದು ಅವರು ಹೇಳಿದರು.

24 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರ: ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿಯ ಮೇಲೆ ನಡೆದ ಅತ್ಯಾಚಾರ-ಕೊಲೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನಕ್ಕೆ ಒಗ್ಗಟ್ಟಿನ ವ್ಯಕ್ತಪಡಿಸಲು ನಿವಾಸಿ ವೈದ್ಯರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ಯುವತಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ಮಹಿಳೆಯರ ಮಧ್ಯರಾತ್ರಿ ಪ್ರತಿಭಟನೆಯ ನಡುವೆ ಗುರುವಾರ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ನರ್ಸಿಂಗ್ ಸ್ಟೇಷನ್, ಔಷಧಿ ಅಂಗಡಿ ಮತ್ತು ಹೊರರೋಗಿ ವಿಭಾಗದ ಭಾಗಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್​​​ಗಳು ಬೆಂಬಲ ಕೊಟ್ಟಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಒಪಿಡಿ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net