

ಬೆಂಗಳೂರು: ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಘಟಕದ ಪ್ರಮುಖ ನಾಯಕರು ರಸ್ತೆಯ ಪಕ್ಕದ ಬ್ಯಾರಿಕೇಡ್ಗಳ ಹಿಂದೆ ಜನ ಸಾಮಾನ್ಯರಂತೆ ನಿಂತು ಮೋದಿಯತ್ತ ಕೈಬೀಸುತ್ತಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಖರ್ಗೆ ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ ಎಂದು ಪ್ರಶ್ನಿಸಿದ್ದಾರೆ.
ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ. ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ಟೀಕಿಸಿದ್ದಾರೆ.
ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ. ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.