

ಬೆಂಗಳೂರು: ರಾಜ್ಯದ ಅಭಿವೃದ್ಧಿ ಬಗ್ಗೆ ಒತ್ತು ಕೊಡಬೇಕಾದ ಸಚಿವರು ತಮ್ಮ ನಾಯಕರ ಭೇಟಿ ಕಾರ್ಯಕ್ರಮ (ಲೀಡರ್ ರನ್ ಪ್ರೋಗ್ರಾಮ್) ಇಟ್ಟುಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ವ್ಯಂಗ್ಯವಾಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಶನಿವಾರ ಮಾಧ್ಯಮದವರ ಜತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಜಗ್ಗಲ್ಲ, ಬಗ್ಗಲ್ಲ ಎನ್ನುತ್ತಿದ್ದವರು ಆತ್ಮಸಾಕ್ಷಿಯ ಬಗ್ಗೆ ಮಾತನಾಡುತ್ತಿದ್ದು, ಅವರ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತಿದೆ ಎಂದರು.
ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಚಿವ ಎಂ.ಬಿ.ಪಾಟೀಲ್, ಡಾ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ ಅವರು ಕುರ್ಚಿ ಮೇಲೆ ಟವೆಲ್ ಹಾಕಲು ಪ್ರಯತ್ನ ಮಾಡುತ್ತಿರುವುದು, ಇವೆಲ್ಲವೂ ಕಾಂಗ್ರೆಸ್ಸಿನಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವ ಬದಲಾವಣೆ ಬೇಕಿದ್ದರೂ ಆಗಬಹುದು ಎಂಬುದರ ಸೂಚನೆ ಎಂದು ವ್ಯಾಖ್ಯಾನಿಸಿದರು.
ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿ ಹೋಗಿರುವುದು ಈ ರಾಜ್ಯದ ಜನರ ದುರದೃಷ್ಟ. ಸಚಿವರು ತಮ್ಮ ಆಕಾಂಕ್ಷೆ ವ್ಯಕ್ತಪಡಿಸುವುದರಲ್ಲಿ, ಅದಕ್ಕೆ ಒಳಸಂಚು ರೂಪಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿಯನ್ನು ಮುಚ್ಚಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ಸೋತು ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಗ್ರಾಮ ಪಂಚಾಯಿತಿ ಬಂದ್ ಮಾಡಿ ಫ್ರೀಡಂ ಪಾರ್ಕಿನಲ್ಲಿ ಅಧಿಕಾರಿಗಳು ಧರಣಿ ಮಾಡುವ ಮಟ್ಟಕ್ಕೆ ಇಲಾಖೆಯಲ್ಲಿ ಅರಾಜಕತೆಯನ್ನು ಸೃಷ್ಟಿಸಿದ್ದಾರೆ ಎಂದು ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳ ಬೇಡಿಕೆ ಸಮರ್ಪಕ ಮತ್ತು ವೈಜ್ಞಾನಿಕವಾಗಿದೆ. ಅವರಿಗೆ ತಕ್ಷಣ ಸ್ಪಂದಿಸಿ ಬೇಡಿಕೆ ಈಡೇರಿಸಲು ಬಿಜೆಪಿ ಒತ್ತಾಯಿಸುತ್ತದೆ. ಪ್ರಿಯಾಂಕ್ ಖರ್ಗೆಗೆ ದೊಡ್ಡ ದೊಡ್ಡ ನಾಯಕರ ಕುರಿತು ಕಾಮೆಂಟ್ ಮಾಡುವುದು ಬಿಟ್ಟರೆ ತಮ್ಮ ಇಲಾಖೆ ನಿರ್ವಹಿಸುವುದು ಗೊತ್ತಾಗುತ್ತಿಲ್ಲ.
ಮೂರು ತಿಂಗಳಿಂದ ಶಿಕ್ಷಕರ ವೇತನ ಕೊಟ್ಟಿಲ್ಲ. ಅಂಗನವಾಡಿ ಅಧಿಕಾರಿಗಳಿಗೆ ವೇತನ ಬಂದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಕಾಯಕಲ್ಪ ಸಿಕ್ಕಿಲ್ಲವೆಂದು ಪಿ.ರಾಜೀವ್ ದೂರಿದರು.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಭತ್ಯೆ ಪಾವತಿಯಾಗದ ಬಗ್ಗೆ ಮಾಧ್ಯಮದವರು ಯಾವಾಗ ಕೇಳಿದರೂ ಇವತ್ತು- ನಾಳೆ ಹಣ ಬಿಡುಗಡೆ ಆಗಲಿದೆ ಎಂದು ಹೇಳುತ್ತ ದಿನಗಳನ್ನು ದೂಡುತ್ತಿದ್ದಾರೆ. ಗೃಹಲಕ್ಷ್ಮಿಯ ಗ್ರಹಣವನ್ನು ಬಿಡಿಸಲು ನಾವು ಬೆಳಗಾವಿಯ ಲಕ್ಷ್ಮಿಗೆ ವಿನಂತಿ ಮಾಡುತ್ತೇವೆ ಎಂದರು.
ಸಚಿವರು ಸಿಎಂ ಕುರ್ಚಿಗೆ ಟವೆಲ್ ಹಾಕುವುದು, ಹೈಕಮಾಂಡ್ ಭೇಟಿಯನ್ನು ಬಿಟ್ಟು ರಾಜ್ಯ, ಜಿಲ್ಲಾ ಪ್ರವಾಸ ಮಾಡಿ ಅಭಿವೃದ್ಧಿ ಕಡೆ ಒತ್ತು ಕೊಡಬೇಕು. ಮುಷ್ಕರನಿರತ ಎಲ್ಲ ಅಧಿಕಾರಿಗಳ ಬೇಡಿಕೆ ಈಡೇರಿಸಿ ಜನಪರ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಈಗ ಯಾರದೋ ಮದುವೆಯಲ್ಲಿ ಉಂಡವನೇ ಜಾಣ ಎಂಬ ಸ್ಥಿತಿಯನ್ನು ಕಾಂಗ್ರೆಸ್ ನಿರ್ಮಿಸಿದೆ ಎಂದು ಪಿ.ರಾಜೀವ್ ಟೀಕಿಸಿದರು.