ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮಕ್ಕೆ ಮತ್ತೊಮ್ಮೆ ಕಾಂಗ್ರೆಸ್​ ನಾಯಕರ ಆಗ್ರಹ

Somashekar Reddy
Published on

ಬಳ್ಳಾರಿ: ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ್​ ರೆಡ್ಡಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್​ ಸದಸ್ಯ ಅಲ್ಲಂ ವೀರಭದ್ರಪ್ಪ ಅವರು ಬಳ್ಳಾರಿ ಎಸ್​ಪಿ ಹಾಗೂ ಐಜಿ ಅವರನ್ನು ಒತ್ತಾಯಿಸಿದ್ದಾರೆ.

ಪೌರತ್ವ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರು ಸಮುದಾಯವನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್​ ಮುಖಂಡರು ಬಳ್ಳಾರಿ ಪೊಲೀಸ್​ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಹಾಗೂ ಐಜಿ ನಂಜುಂಡಸ್ವಾಮಿ ಅವರನ್ನು ಭೇಟಿ ಮಾಡಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ದೂರು ನೀಡಿ ಬಂಧಿಸುವಂತೆ ಆಗ್ರಹಿಸಿದ್ದರು.

ದೂರು ನೀಡಿ ಹಲವು ದಿನ ಕಳೆದರೂ ಪೊಲೀಸರು ಶಾಸಕ ಸೋಮಶೇಖರ ರೆಡ್ಡಿ ಅವರ ವಿರುದ್ಧ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಶನಿವಾರ ಮತ್ತೊಮ್ಮೆ ಎಸ್​ಪಿ ಹಾಗೂ ಐಜಿ ಕಚೇರಿಗೆ ತೆರಳಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು.

ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ನೀಡಿರುವ ದೂರಿನ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳಲು ಇನ್ನು 20ದಿನ ಸಮಯ ಬೇಕು. ತನಿಖೆ ಪೂರ್ಣಗೊಳಿಸಿದ ನಂತರ ಕ್ರಮ ಜರುಗಿಸಲಾಗುವುದು ಎಂದು ಎಸ್​ಪಿ ದೂರುದಾರರಿಗೆ ಅಭಯ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net