

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾ.7ರಿಂದ ಪ್ರಾರಂಭಗೊಳ್ಳುವ ಮಹಾಶಿವರಾತ್ರಿ ಮತ್ತು ಏ.6 ರಿಂದ ಆರಂಭವಾಗಲಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಭಾಗವಹಿಸುವ ಭಕ್ತರಿಗೆ ಸೂಕ್ತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾತ್ರಾ ಮಹೋತ್ಸವ ಸಂಬಂಧ ಗುರುವಾರ ಪೂರ್ವ ಸಿದ್ಧತಾ ಸಭೆ ನಡೆಸಿದರು. ಮಹಾಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಾರೆ. ಹೀಗಾಗಿ, ಅವರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಶ್ರೀಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಮಾತನಾಡಿ, ಕಾವೇರಿ ನೀರು ಸರಬರಾಜು ಯೋಜನೆಯಿಂದ ನಿರ್ಮಿಸಿರುವ 90 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್‌ನಲ್ಲಿ ನೀರು ಶೇಖರಣೆ ಮಾಡಿ ನೀರು ಶುದ್ಧೀಕರಣ ಘಟಕಕ್ಕೆ ನೀರು ಬಿಟ್ಟು ಶುದ್ಧೀಕರಿಸಿ ಸರಬರಾಜು ಮಾಡಲು ಕ್ರಮವಹಿಸಲಾಗಿದೆ. 8 ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ನೀರು ಪೂರೈಸಲಾಗುತ್ತದೆ. ಪರ ಮಾಡುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಸೌಲಭ್ಯ ಕಲ್ಪಿಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಬರುವ ಭಕ್ತರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇರಬೇಕು. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಭಕ್ತರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಮಾತನಾಡಿ, ಪಾದಯಾತ್ರೆ ಹಾಗೂ ವಾಹನಗಳ ಮುಖಾಂತರ ಬರುವ ಭಕ್ತರನ್ನು ತಾಳಬೆಟ್ಟದಲ್ಲಿಯೇ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲು ಮನವರಿಕೆ ಮಾಡಿಕೊಡಲಾಗುತ್ತದೆ. ಪ್ಲಾಸ್ಟಿಕ್ ಹಾಗೂ ತ್ಯಾಜ್ಯಗಳನ್ನು ಹಾಕಲು ಕಸದ ಬುಟ್ಟಿಗಳನ್ನು ಇಡುವ ವ್ಯವಸ್ಥೆ ಮಾಡಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಟ್ಯಾಂಕ್‌ಗಳನ್ನು ಇಡಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಡಿಸಿ ಶಿಲ್ಪಾನಾಗ್ ಮಾತನಾಡಿ, ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ವ್ಯಾಪಕವಾಗಿ ಆಗಬೇಕಿದೆ. ತುರ್ತು ಸಂದರ್ಭಗಳಲ್ಲಿ ಅವಶ್ಯಕತೆ ಇರುವ ಕಡೆ ನೆರಳಿಗೆ ಸೂಕ್ತ ಕ್ರಮವಹಿಸಬೇಕು. ಅಂತರಗಂಗೆ ಸ್ನಾನಘಟ್ಟದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಕಾಯಂ ಶೌಚಗೃಹ ಜತೆಗೆ ತಾತ್ಕಾಲಿಕ ಶೌಚಗೃಹಗಳ ವ್ಯವಸ್ಥೆ ಮಾಡಬೇಕು. ಸ್ನಾನಕ್ಕಾಗಿ ಷವರ್‌ಗಳನ್ನು ಅಳವಡಿಸಬೇಕು. ಸ್ನಾನ ಗೃಹ ಹಾಗೂ ಶೌಚಗೃಹಗಳ ನಿರಂತರ ಸ್ವಚ್ಛತೆಗೆ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.
ನಿತ್ಯ ದಾಸೋಹದ ಜತೆಗೆ ವಿಶೇಷ ದಾಸೋಹ ಇರಬೇಕು. ಇದಕ್ಕೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ಪೂರ್ಣಗೊಳಿಸಬೇಕು. ವಿವಿಧ ಭಾಗಗಳಿಂದ ಹೆಚ್ಚು ಸಂಖ್ಯೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ಕಾರ್ಯಾಚರಣೆಯಾಗಬೇಕು. ತಮಿಳುನಾಡಿನಿಂದಲೂ ಕ್ಷೇತ್ರಕ್ಕೆ ಬರುವ ಬಸ್ಸುಗಳ ಸಂಖ್ಯೆ ಹೆಚ್ಚಳವಾಗಬೇಕು ಎಂದು ಸೂಚಿಸಲಾಯಿತು.
ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಅವರು ಜಾತ್ರಾ ಸಂಬಂಧ ಅಗತ್ಯ ಸೂಚನೆ ಹಾಗೂ ಸಲಹೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್‌ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಮಹೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಉಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.