

ಶಿವಮೊಗ್ಗ: ಸಹಕಾರ ಸಂಘದಿಂದ ಸಾಲ ಪಡೆದವರು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ನೂತನ ಮೇಲ್ಮಹಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಡಿಗ ಸಮುದಾಯಯ ಇಂದು ಪ್ರಬಲವಾಗಿದೆ. ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕು. ನಾವು ಒಗ್ಗಟ್ಟು ಪ್ರದರ್ಶಿಸಿದೇ ಇದ್ದರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ನಮ್ಮ ಸಮಾಜಕ್ಕ ನಾರಾಯಣ ಗುರುಗಳ ಕೊಡುಗೆ ಸಾಕಷ್ಟಿದೆ. ಹೀಗಾಗಿ ರಾಜ್ಯಮಟ್ಟದಲ್ಲಿ ನಾರಾಯಣ ಗುರು ಜಯಂತಿ ಆಚರಣೆ ಮಾಡಲಾಗುತ್ತಿದೆ. ಅವರ ಹೆಸರಿನಲ್ಲಿ ಶಾಲೆಗಳನ್ನು ತೆರೆಯಲಾಗಿದೆ. ಮುಂದೆ ನಾರಾಯಣ ಗುರುಗಳ ಹೆಸರಿನಲ್ಲಿ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಗಂದೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ಎಸ್.ರಾಮಪ್ಪ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಸಂಘದ ಅಧ್ಯಕ್ಷ ಡಾ. ಜಿ.ಡಿ.ನಾರಾಯಣಪ್ಪ ಅಧ್ಯಕ್ಷತೆ ವಹಿಸಿದ್ದರು. ಗರ್ತಿಕೆರೆ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಸಂಘದ ಉಪಾಧ್ಯಕ್ಷ ಕೆ.ಪಿ.ದಯಾನಂದ, ನಿರ್ದೇಶಕರಾದ ಎಸ್.ಗೀತಾಂಜಲಿ ದತ್ತಾತ್ರೇಯ, ಡಿ.ದೇವಪ್ಪ, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಇತರರಿದ್ದರು.