

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ರವಿಕುಮಾರ್ ಹೇಳಿದರು.
ಬದಲಿ ನಿವೇಶನ ಹಂಚಿಕೆಯಲ್ಲಿ ಮುಡಾದಲ್ಲಿ ಸಾವಿರಾರು ಕೋಟಿ ರೂ. ಮೊತ್ತದ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೇಲೂ ಆರೋಪಗಳು ಇದೆ. ಹೀಗಾಗಿ ತನಿಖಾಧಿಕಾರಿ ಯಾವುದೇ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಮುಖ್ಯಮಂತ್ರಿ ಕುಟುಂಬದವರ ಮೇಲೆ ಆರೋಪಗಳು ಇರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆದರೆ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಲಹೆ ಮೇರೆಗೆ ನಗರಾಭಿವೃದ್ಧಿ ಯೋಜನೆಗಳ ನಿರ್ದೇಶನಾಲಯದ ಆಯುಕ್ತ ವೆಂಕಟಾಚಲಪತಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಈ ತನಿಖೆಯ ಫಲಿತಾಂಶ ಏನಾಯಿತು? ಮುಡಾದಿಂದ ನಗರಾಭಿವೃದ್ಧಿ ಸಚಿವರು ಕಡತ ತೆಗೆದುಕೊಂಡು ಹೋಗಿರುವ ಆರೋಪಗಳು ಇದ್ದು, ಆ ಕಡತಗಳು ಏನಾಯಿತು ಎಂಬುದಕ್ಕೆ ಉತ್ತರ ದೊರೆಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳಾದ ಸುಂದರ್ ಪ್ರೇಮ್ ಕುಮಾರ್, ಎನ್. ನಾಗೇಂದ್ರ, ಆನಂದನ್ ಇದ್ದರು.