ಮುಡಾ ಹಗರಣ; ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಯತ್ನಾಳ್ ಪತ್ರ

Published on

ಬೆಂಗಳೂರು:
ಮುಡಾ ಹಗರಣವನ್ನು ಸಿಬಿಐಗೆ ವಹಿಸಲು ಕೋರಿ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಳ್ಳುವಂತೆ ಮಾಜಿ ಸಚಿವ ಬಸನಗೌಡ ಯತ್ನಾಳ್ ಅವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣವು ಸುಮಾರು ₹ 4,000 ಕೋಟಿ ಒಳಗೊಂಡಿರುವ ಗಂಭೀರ ಹಗರಣವಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರು ಭಾಗಿಯಾಗಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಹಿಂಪಡೆಯಲು ಸಂಪುಟ ಸಚಿವರೊಬ್ಬರು ಮೈಸೂರಿಗೆ ಪ್ರಯಾಣಿಸಿದ್ದಾರೆ ಎಂದು ಇತ್ತೀಚಿನ ಮಾಧ್ಯಮ ವರದಿಗಳು ಬಹಿರಂಗಪಡಿಸಿವೆ ಎಂದಿದ್ದಾರೆ.
ಆದ್ದರಿಂದ ಮುಡಾ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಅಲ್ಲದೆ, ಹೈಕೋರ್ಟ್ ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮೇಲ್ವಿಚಾರಣೆ ಮಾಡಬೇಕೆಂದು ಬಸನಗೌಡ ಯತ್ನಾಳ್ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net