

ಬೆಂಗಳೂರು: ಅಪ್ರಾಪ್ತ ಬಾಲಕಿರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ನಿರ್ದಿಷ್ಟ ಭಾಗವನ್ನು ತೆಗೆದುಹಾಕಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪೋಕ್ಸೊ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕಟಿಸಿದ್ದು, ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಮೊದಲ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯು ಸಿಆರ್‌ಪಿಸಿ ಸೆಕ್ಷನ್ 164 ಅಡಿ ದಾಖಲಿಸಿರುವ ಹೇಳಿಕೆಯ ನಿರ್ದಿಷ್ಟ ಭಾಗವನ್ನು ತೆಗೆದು ಹಾಕಬೇಕು ಎಂಬುದು ಅರ್ಜಿದಾರರ ಕೋರಿಕೆಯಾಗಿತ್ತು. ಇದನ್ನು ನ್ಯಾಯಾಲಯ ಪುರಸ್ಕರಿಸಿಲ್ಲ.