

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮುಸ್ಲಿಂ ಧರ್ಮದ ಯುವಕನೊಬ್ಬ ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಘಟನೆಯು ಉನ್ನಾವೋದ ಬೋದೇಶ್ವರ ದೇವಾಲಯದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಪಪ್ಪು (26) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಂಗಾರ್ಮೌ ಪೊಲೀಸ್ ಠಾಣಾಧಿಕಾರಿ ಬಂಧಿತ ಆರೋಪಿ ಯಾವ ಕಾರಣಕ್ಕೆ ದೇವಾಲಯಕ್ಕೆ ನುಗ್ಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಆರೋಪಿ ರಾಡ್ನಿಂದ ದೇವಾಲಯದಲ್ಲಿದ್ದ ಭಕ್ತಾದಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 307 (ಕೊಲೆ ಯತ್ನ) ಅಡಿ FIR ದಾಖಲಿಸಲಾಗಿದೆ. ಶೀಘ್ರದಲ್ಲೇ ವಿಚಾರಣೆ ಮುಗಿಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಬಂಗಾರ್ಮೌ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.