

ಶಿವಮೊಗ್ಗ: ಸರ್ಕಾರಿ ನೌಕರರಿಗೆ ಶಾಸನಬದ್ಧವಾಗಿ ದೊರೆಯಬೇಕಾದ ಸವಲತ್ತುಗಳನ್ನು ಒದಗಿಸುವಂತೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಭರವಸೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಪದಾಧಿಕಾರಿಗಳಿಂದ ಬುಧವಾರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಸರ್ಕಾರ ನೌಕರರ ವೇತನ ಪರಿಷ್ಕರಣೆಯಾಗಬೇಕು. ಅದರಲ್ಲಿ ಲೋಪವಾಗಬಾರದು. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಸರ್ಕಾರಿ ನೌಕರರದ್ದು. ಅವರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್ ಮಾತನಾಡಿ, 7ನೇ ವೇತನ ಆಯೋಗ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಬೇಕು. ಈಗಾಗಲೇ ಆಯೋಗವು ವರದಿ ನೀಡಿ ಅನೇಕ ತಿಂಗಳುಗಳೇ ಉರುಳಿವೆ. ಇನ್ನೂ ವಿಳಂಬ ಮಾಡಿದರೆ ನಾವು ಒಪ್ಪಿಕೊಳ್ಳುವುದಿಲ್ಲ ಎಂದರು.
6ನೇ ವೇತನ ಆಯೋಗದ ವರದಿ ಅನುಷ್ಟಾನಗೊಂಡು 5 ವರ್ಷಗಳ ಅವಧಿ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು 2022ರ ಜುಲೈನಲ್ಲಿ ಪರಿಷ್ಕರಣೆ ಮಾಡಬೇಕಿತ್ತು. ಆದರೆ ಇನ್ನೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಕೋಶಾಧ್ಯಕ್ಷ ಎಸ್.ಆರ್.ನರಸಿಂಹಮೂರ್ತಿ, ಕಾರ್ಯಾಧ್ಯಕ್ಷ ಡಾ.ಸಿ.ಎ.ಹಿರೇಮಠ್, ಗೌರವಾಧ್ಯಕ್ಷ ಆರ್.ಪಾಪಣ್ಣ, ಹಿರಿಯ ಉಪಾಧ್ಯಕ್ಷ ಕೆ.ಪ್ರಸನ್ನ ಮುಂತಾದವರ ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.