

ನಾಗ್ಪುರ: ಸೋಲಾರ್ ಕಾರ್ಖಾನೆಯಲ್ಲಿ ಸ್ಫೋಟಕ ಸಾಮಗ್ರಿಗಳ ತಯಾರಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಘಟನೆಯಲ್ಲಿ ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಶೀಘ್ರವೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಘಟನೆ ಬೆಳಗ್ಗೆ 9 ಘಂಟೆ ಸುಮಾರಿಗೆ ಸೋಲಾರ್ ಇಂಡಸ್ಟ್ರೀಸ್ ಎಂಬ ಕಂಪನಿಯಲ್ಲಿ ಸಂಭವಿಸಿದ್ದು, ಈ ಕಂಪನಿಯಲ್ಲಿ ಸ್ಪೋಟಕ ಸಾಮಗ್ರಿಗಳನ್ನು ತಯಾರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ವೇಳೆ ಎಷ್ಟು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಮತ್ತು ಯಾವ ಕಾರಣಕ್ಕೆ ಸ್ಪೋಟ ಸಂಭವಿಸಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವಘಡದಿಂದ ತಾವು ಆಘಾತಕ್ಕೆ ಒಳಗಾಗಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಗಾಯಾಳುಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.