

ಬೆಂಗಳೂರು: ‘ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತದೆ. ನೈತಿಕವಾಗಿ ಜವಾಬ್ದಾರಿ ಹೊತ್ತು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ. ನಿರ್ಧಾರದ ಬಗ್ಗೆ ಮೌಖಿಕವಾಗಿಯೂ ತಿಳಿಸಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ನಳಿನ್ ಕುಮಾರ್ ಕಟೀಲ್ ಉಲ್ಟಾ ಹೊಡೆದಿದ್ದಾರೆ. 'ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು' ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.
ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
‘ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಯಾವುದೇ ಕೂಗಿಲ್ಲ. ಆದರೇ ನನ್ನ ಎರಡು ಟರ್ಮ್ನ ಅವಧಿ ಮುಗಿದಿದೆ. ಹೀಗಾಗಿ ಸಹಜವಾಗಿಯೇ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು. ನಮ್ಮ ಪಕ್ಷದಲ್ಲಿ ಅಧ್ಯಕ್ಷರ ಅವಧಿ ಎರಡು ವರ್ಷ. ಆದರೆ ನಾನು ನಾಲ್ಕು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ’ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ಬದಲಾವಣೆ ಕೂಗಿಲ್ಲ. ವಿ.ಸೋಮಣ್ಣ ಅವರು ಅಧ್ಯಕ್ಷ ಸ್ಥಾನ ಕೇಳಿದರೆ ಯಾವುದೇ ತಪ್ಪಿಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕ. ರಾಷ್ಟ್ರೀಯ ಅಧ್ಯಕ್ಷರಿಗೆ ಏನು ಹೇಳಬೇಕೊ ಅದನ್ನು ಈಗಾಗಲೇ ಹೇಳಿ ಕಳುಹಿಸಿದ್ದೇನೆ ಎಂದರು.