ಒಂದು ವರ್ಷದ ಅವಧಿಯಲ್ಲಿ 193 ಕಾಮಗಾರಿ ಪೂರ್ಣ

29 HANUR 2
Published on

ಹನೂರು : ಕಳೆದ ಒಂದು ವರ್ಷದ ಅವಧಿಯಲ್ಲಿ ನರೇಗಾ ಯೋಜನೆಯಡಿ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 193 ಕಾಮಗಾರಿ ನಡೆದಿದ್ದು, 2.86 ಕೋಟಿ ರೂ ಅನುದಾನವನ್ನೂ ಸೂಕ್ತವಾಗಿ ಖರ್ಚು ಮಾಡಲಾಗಿದೆ ಎಂದು ನರೇಗಾ ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.

ತಾಲೂಕಿನ ದಿನ್ನಳ್ಳಿ ಗ್ರಾಪಂ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ಧ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದರು. ನರೇಗಾ ಯೋಜನೆಯಡಿ ದಿನ್ನಳ್ಳಿ ಗ್ರಾಪಂ ವತಿಯಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ವಸತಿ ಯೋಜನೆಗೆ ಅನುದಾನ, ಹೂಳೆತ್ತುವ ಕಾಮಗಾರಿ. ಕೊಟ್ಟಿಗೆ ನಿರ್ಮಾಣ, ಸಿಸಿ ರಸ್ತೆ, ಚರಂಡಿ, ಚೆಕ್ ಡ್ಯಾಂ ನಿರ್ಮಾಣ, ಮೆಟ್ಲಿಂಗ್ ರಸ್ತೆ, ಕೆರೆ ಅಭಿವೃದ್ಧಿ ಸೇರಿದಂತೆ 193 ಕಾಮಗಾರಿಗಳು ನಡೆದಿದೆ. ಕೂಲಿ ವೆಚ್ಚ 1,91,70,845 ರೂ. ವಿವಿಧ ಸಾಮಗ್ರಿ ವೆಚ್ಚ 94,62,042 ರೂ. ಸೇರಿದಂತೆ 2,86,32,887 ರೂ. ಅನುದಾನ ಬಳಕೆಯಾಗಿದೆ. ಸ್ಥಳಕ್ಕೆ ತೆರಳಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಲಾಗಿದೆ. ಆದ್ದರಿಂದ ಆಕ್ಷೇಪಣೆಗಳಿದ್ದಲ್ಲಿ ಗ್ರಾಮಸ್ಥರು ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗೆ ಸಹಕರಿಸಿ : ಪಿಡಿಒ ಸುರೇಶ್ ಮಾತನಾಡಿ, ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಇದರಲ್ಲಿ ಪ್ರತಿ ಕುಟುಂಬವೂ ಉದ್ಯೋಗವನ್ನು ಪಡೆಯಬಹುದಾಗಿದೆ. ಇದರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದ್ದು, ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಪ್ರತಿಯೊಬ್ಬರೂ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಮಸ್ಯೆಗಳಿದ್ದಲ್ಲಿ ಗ್ರಾಪಂ ಗಮನಕ್ಕೆ ತರಬೇಕು. ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಬಳಿಕ ಸಭೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಖರ್ಚು ವೆಚ್ಚದ ಬಗ್ಗೆ ಮಾಹಿತಿ ಮಂಡಿಸಲಾಯಿತು. ಈ ವೇಳೆ ಗ್ರಾಮಸ್ಥರು ಕೆಲ ಸಮಸ್ಯೆಗಳನ್ನು ಹೇಳಿಕೊಂಡರು. ಪಿಡಿಒ ಸುರೇಶ್ ಅವರು ಬಗೆಹರಿಸುವುದಾಗಿ ಅಗತ್ಯ ಭರವಸೆ ನೀಡಿದರು. ಗ್ರಾಪಂ ಅಧ್ಯಕ್ಷೆ ಪಾರ್ವತಿಬಾಯಿ, ಉಪಾಧ್ಯಕ್ಷ ರಾಮಕೃಷ್ಣ, ಸದಸ್ಯರಾದ ಮುರುಗೇಶ್, ಅಬ್ದುಲ್ ನವಾಬ್, ಸರೋಜಾಬಾಯಿ, ರತ್ನಬಾಯಿ, ನೋಡಲ್ ಅಧಿಕಾರಿ ಸಿಆರ್‌ಪಿ ಚಂದ್ರಶೇಖರ್, ಗ್ರಾಪಂ ನೌಕರರಾದ ನಾಗರಾಜು, ಮಂಜುಳಾ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net