ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್: ದಿನ? ಸಮಯ ವಿವರ ಇಲ್ಲಿದೆ ನೋಡಿ..

modi
Published on

ನವದೆಹಲಿ: ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಯ ನಿಗದಿಯಾಗಿದೆ. ಜೂನ್ 9 ರಂದು ಸಂಜೆ 7.15 ಕ್ಕೆ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ ಕೇಂದ್ರ ಸಚಿವ ಸಂಪುಟದ ಕೆಲವು ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ.

ಶುಕ್ರವಾರ ಮಧ್ಯಾಹ್ನ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಸಂಸದೀಯ ಪಕ್ಷದ ಸಭೆ ನಡೆಯಿತು. ಇದರಲ್ಲಿ ರಾಜನಾಥ್ ಸಿಂಗ್ ಅವರು ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ ಮೈತ್ರಿ ಪಕ್ಷಗಳ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ. ಸಭೆಯ ನಂತರ ನರೇಂದ್ರ ಮೋದಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ನಾಯಕರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಹೊಸ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪತ್ರವನ್ನು ನೀಡಲಾಯಿತು. ಬಳಿಕ ದ್ರೌಪತಿ ಮುರ್ಮು ಅವರು ಮೋದಿ ಅವರನ್ನು ಹೊಸ ಸರ್ಕಾರ ರಚಿಸಲು ಆಹ್ವಾನಿಸಿದರು.

ಇದರೊಂದಿಗೆ ಜೂನ್ 9 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ರಾಷ್ಟ್ರಪತಿ ಭವನದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನರೇಂದ್ರ ಮೋದಿ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಷ್ಟ್ರಪತಿಗಳು ತಮ್ಮನ್ನು ಆಹ್ವಾನಿಸಿದ್ದಾರೆ. ಜು.9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ಇರುವುದಾಗಿ ರಾಷ್ಟ್ರಪತಿಗಳಿಗೆ ತಿಳಿಸಿರುವುದಾಗಿ ತಿಳಿಸಿದರು.

ಕೇಂದ್ರದಲ್ಲಿ ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದ್ದು, ಚುನಾವಣೆಯಲ್ಲಿ ಎನ್ ಡಿಎ 293 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿದೆ. 2019ರ ಚುನಾವಣೆಯಲ್ಲಿ ಇದೇ ಬಿಜೆಪಿ 303 ಸ್ಥಾನಗಳನ್ನು ಗೆದ್ದಿತ್ತು.

ಇನ್ನು 543 ಸದಸ್ಯರ ಲೋಕಸಭೆಯಲ್ಲಿ 233 ಸಂಸದರು ಇಂಡಿಯಾ ಮೈತ್ರಿಕೂಟಕ್ಕೆ ಸೇರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net