ಭೀಕರ ಅಪಘಾತ; ರಸ್ತೆ ಬದಿಯ ಕಂದಕಕ್ಕೆ ಬಿದ್ದ ಪ್ರವಾಸಕ್ಕೆ ತೆರಳುತ್ತಿದ್ದ ವ್ಯಾನ್​: 9 ಮಂದಿ ಸಾವು | Accident

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಕೇರಳದ ಪ್ರವಾಸಿ ವ್ಯಾನ್​ವೊಂದು ತಿರುವಿನಲ್ಲಿ ಕಂದಕಕ್ಕೆ ಉರುಳಿ ಬಿದ್ದು, ಅಪಘಾತ(Accident) ಸಂಭವಿಸಿದ್ದು, ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ(ಏ. 17) ಸಂಜೆ ಕೊಯಮತ್ತೂರು ವಾಲ್ಪಾರೈ ಘಾಟ್ ವಿಭಾಗದ 13ನೇ ಹೇರ್ ಪಿನ್ ತಿರುವಿನಲ್ಲಿ ವ್ಯಾನ್ ವಾಲ್ಪಾರೈನಿಂದ ಪೊಲ್ಲಾಚಿಗೆ ಇಳಿಯುವಾಗ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಪರಿಣಾಮ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ವ್ಯಾನ್​ನಲ್ಲಿ ಒಟ್ಟು 13 ಮಂದಿ ಪ್ರಯಾಣಿಸುತ್ತಿದ್ದರು. ಕೇರಳದ ಮಲಪ್ಪುರಂ ನಿವಾಸಿಗಳು ಎನ್ನಲಾಗಿದ್ದು ಪ್ರವಾಸಕ್ಕೆ ತೆರಳಿದ್ದರು. ಅಪಘಾತದಿಂದ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎನ್ನಲಾಗಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಮೇಲೆತ್ತಿ ಪೊಲ್ಲಾಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಯಿತು. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನೂ ಘಟನೆ ಬಗ್ಗೆ ಕೊಯಮತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net