ಮಹಿಳಾ ವಿರೋಧಿ ಕಾಂಗ್ರೆಸ್‌ಗೆ ಜನರೇ ಪಾಠ ಕಲಿಸುತ್ತಾರೆ; ಮಸೂದೆ ಸೋಲಿನ ಬಳಿಕ ಕಿರಣ್ ರಿಜಿಜು ಗುಡುಗು | Kiren Rijiju

Kiren Rijiju | ಕೇಂದ್ರ ಸಚಿವ ಕಿರಣ್ ರಿಜಿಜು
Kiren Rijiju | ಕೇಂದ್ರ ಸಚಿವ ಕಿರಣ್ ರಿಜಿಜು
Published on
ದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಮರುದಿನವೇ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದು ಮೊದಲ ಶಾಸಕಾಂಗ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಈ ಘಟನೆಯನ್ನು ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿಯ ಫಲಿತಾಂಶ ಎಂದು ಸರ್ಕಾರ ಆರೋಪಿಸಿದೆ.
ನವದೆಹಲಿಯಲ್ಲಿ ಶನಿವಾರ (ಏ.18) ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಮಸೂದೆಯನ್ನು ಸೋಲಿಸಿದ ವಿರೋಧ ಪಕ್ಷಕ್ಕೆ ದೇಶದ ಜನತೆ ಪ್ರಜಾಸತ್ತಾತ್ಮಕವಾಗಿ ಶಿಕ್ಷೆ ನೀಡಲಿದ್ದಾರೆ ಎಂದರು. ಇದನ್ನು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಕರೆದ ರಿಜಿಜು, ಇದು ಸರ್ಕಾರದ ವೈಫಲ್ಯವಲ್ಲ ಬದಲಿಗೆ ದೇಶದ ಮಹಿಳೆಯರಿಗೆ ಹಕ್ಕು ಸಿಗದಂತೆ ತಡೆದ ಕಾಂಗ್ರೆಸ್‌ನ ವೈಫಲ್ಯ ಎಂದರು.
ಮಹಿಳೆಯರಿಗೆ ಮೀಸಲಾತಿ ನೀಡುವುದು ಸಂವಿಧಾನಬಾಹಿರ ಎಂಬ ರಾಹುಲ್ ಗಾಂಧಿಯವರ ನಿಲುವು ಆಶ್ಚರ್ಯಕರವಾಗಿದ್ದು, ಕಾಂಗ್ರೆಸ್ ನಾಯಕತ್ವದ ಹಠಮಾರಿ ಧೋರಣೆಯಿಂದಾಗಿ ಅನೇಕ ಕಾಂಗ್ರೆಸ್ ಸಂಸದರು ಮನಸ್ಸಿಲ್ಲದಿದ್ದರೂ ಮಸೂದೆಯನ್ನು ವಿರೋಧಿಸಬೇಕಾಯಿತು ಎಂದು ಅವರು ಪ್ರತಿಪಾದಿಸಿದರು.
ಕ್ಷೇತ್ರ ಪುನರ್ವಿಂಗಡಣೆಯಿಂದ ಯಾವುದೇ ರಾಜ್ಯವು ತನ್ನ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಸ್ಮರಿಸಿದ ರಿಜಿಜು, ಮಹಿಳಾ ಮೀಸಲಾತಿ ಜಾರಿಗೆ ಕ್ಷೇತ್ರ ಪುನರ್ವಿಂಗಡಣೆ ತಾಂತ್ರಿಕವಾಗಿ ಅಗತ್ಯವಾಗಿದೆ ಎಂಬುದು ತಿಳಿದಿದ್ದರೂ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದೆ ಎಂದು ಅವರು ದೂರಿದರು. ಮಸೂದೆ ಸೋಲಿನ ಬಳಿಕ ಕಾಂಗ್ರೆಸ್ ನಾಟಕವಾಡುತ್ತಿದ್ದು, ಅವರ ನೈಜ ಬಣ್ಣ ಶೀಘ್ರದಲ್ಲೇ ಜನರ ಮುಂದೆ ಬಯಲಾಗಲಿದೆ ಎಂದರು.

ಸರ್ಕಾರದ ಮುಂದಿನ ನಡೆ ಏನು..?

ಸಂವಿಧಾನ ತಿದ್ದುಪಡಿ ಮಸೂದೆ ಸೋತ ಹಿನ್ನೆಲೆಯಲ್ಲಿ, ಇದರೊಂದಿಗೆ ಸಂಬಂಧ ಹೊಂದಿದ್ದ ಡಿಲಿಮಿಟೇಶನ್ ಬಿಲ್ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಮಹಿಳೆಯರಿಗೆ ಹಕ್ಕು ನೀಡುವ ಮೋದಿ ಸರ್ಕಾರದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಗುರಿ ಮುಟ್ಟುವವರೆಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ರಿಜಿಜು ಸ್ಪಷ್ಟಪಡಿಸಿದ್ದಾರೆ.
ಸದ್ಯ ಮಸೂದೆ ಪತನದಿಂದಾಗಿ ಮೂರು ದಿನಗಳ ವಿಶೇಷ ಅಧಿವೇಶನವು ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಸದನವನ್ನು ಶನಿವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ.

ಮಸೂದೆಗೆ ಸೋಲು..

ಸಂಸತ್ತಿನಲ್ಲಿ ನಡೆದ ಮತದಾನದ ವಿವರಗಳ ಪ್ರಕಾರ, ಚರ್ಚೆಯ ಬಳಿಕ ನಡೆದ ಮತದಾನದಲ್ಲಿ ಒಟ್ಟು 528 ಸದಸ್ಯರು ಭಾಗವಹಿಸಿದ್ದರು. ಈ ಪೈಕಿ 298 ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 230 ಸದಸ್ಯರು ಮಸೂದೆಯನ್ನು ವಿರೋಧಿಸಿ ಮತ ಹಾಕಿದರು. ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರವಾಗಲು ಸದನದಲ್ಲಿ ಹಾಜರಿದ್ದು ಮತ ಚಲಾಯಿಸುವ ಸದಸ್ಯರ ಪೈಕಿ ಕನಿಷ್ಠ ಮೂರನೇ ಎರಡರಷ್ಟು (ಅಂದರೆ ಸುಮಾರು 326 ಮತಗಳು) ಬೆಂಬಲದ ಅಗತ್ಯವಿತ್ತು. ಆದರೆ ಸರ್ಕಾರದ ಪರವಾಗಿ ಚಲಾವಣೆಯಾಗಿದ್ದು 298 ಮತಗಳು.
ಇಂಡಿಯಾ ಕೂಟದ ಬಹುತೇಕ ಎಲ್ಲಾ ಪಕ್ಷಗಳು ಈ ಮಸೂದೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಿದ್ದು ಈ ಸೋಲಿಗೆ ಪ್ರಮುಖ ಕಾರಣವಾಗಿದೆ. ಹೊಸ ಜನಗಣತಿಯಿಲ್ಲದೆ ಕ್ಷೇತ್ರ ಪುನರ್ವಿಂಗಡಣೆ ಮಾಡುವುದು ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆ ತರುತ್ತದೆ ಮತ್ತು ಇದು ಒಬಿಸಿ ಸಮುದಾಯವನ್ನು ನಿರ್ಲಕ್ಷಿಸುವ ಪ್ರಯತ್ನ ಎಂದು ವಿರೋಧ ಪಕ್ಷಗಳು ವಾದಿಸಿದವು. 2029ರ ಚುನಾವಣೆಯಿಂದ ಮೀಸಲಾತಿ ಜಾರಿಯಾಗಲಿದೆ ಎಂಬ ಸರ್ಕಾರದ ಪ್ರಸ್ತಾಪವನ್ನು ಚುನಾವಣಾ ಗಿಮಿಕ್ ಎಂದು ಕರೆದಿದ್ದ ವಿಪಕ್ಷಗಳು, ಅಂತಿಮವಾಗಿ ಸದನದಲ್ಲಿ ಮಸೂದೆಯನ್ನು ತಡೆಯುವಲ್ಲಿ ಯಶಸ್ವಿಯಾಗಿವೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net