

ನವದೆಹಲಿ: ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣಾ ಮಸೂದೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶನಿವಾರ(ನ. 28) ಡಿಲಿಮಿಟೇಷನ್ನಿಂದ ಅನಿರ್ಧಿಷ್ಠಾವಧಿಗೆ ಅಧಿಕಾರದಲ್ಲಿ ಉಳಿಯಲು ಪ್ರಧಾನಿ ಮೋದಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನವದೆಹಲಿಯ ತಮ್ಮ ನಿವಾಸದಲ್ಲಿ ಇಂಡಿಯಾ ಕೂಟದ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದೀಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಅಧಿಕಾರವನ್ನು ಭದ್ರಪಡಿಸಿಕೊಳ್ಳಲು ಮತ್ತು ದೇಶದ ರಾಜಕೀಯ ವ್ಯವಸ್ಥೆಯ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರ ತಮ್ಮ ಹಿಂದಿನ ಚುನಾವಣಾ ಘೋಷಣೆಯಾಗಿದ್ದ "400 ಪಾರ್" ವಿಫಲವಾದ ಬಳಿಕ, ಈಗ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸುವ ಮೂಲಕ "800 ಪಾರ್" ಗುರಿಯನ್ನು ಇಟ್ಟುಕೊಂಡಿದೆ. ಅಧಿಕಾರವನ್ನು ವಶಪಡಿಸಿಕೊಳ್ಳಲು ಮತ್ತು ಅದನ್ನು ಅನಿರ್ದಿಷ್ಟ ಕಾಲದವರೆಗೆ ಉಳಿಸಿಕೊಳ್ಳಲು ಸಹಾಯ ಮಾಡುವ ಉದ್ದೇಶದಿಂದಲೇ ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.
ಪ್ರಸ್ತಾವಿತ ತಿದ್ದುಪಡಿಯಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಹಿತಾಸಕ್ತಿಗಳನ್ನು ಸರ್ಕಾರ ಕಡೆಗಣಿಸಿದೆ ಎಂದು ದೂರಿರುವ ಅವರು, ಪ್ರತಿ ರಾಜ್ಯದಲ್ಲಿ ಈ ಸಮುದಾಯಗಳಿಗೆ ಮೀಸಲಿರಿಸಲಾದ ಸ್ಥಾನಗಳ ಸಂಖ್ಯೆಯು ಅವರ ಜನಸಂಖ್ಯೆಗೆ ಅನುಗುಣವಾಗಿರಬೇಕು. ಆದ್ರೆ ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಲು ಯಾವುದೇ ಅವಕಾಶ ಕಲ್ಪಿಸಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಇನ್ನೂ ಇಂದಿನ ಇಂಡಿಯಾ ಕೂಟದ ಸಭೆಯಲ್ಲಿ, ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಲೋಕಸಭೆಯ ಅಸ್ತಿತ್ವದಲ್ಲಿರುವ ಸದಸ್ಯರ ಬಲವನ್ನು ಕಾಯ್ದುಕೊಳ್ಳುವುದು, ಪ್ರಸ್ತುತ ಸದನದ ಬಲದೊಳಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವುದು. ಹಾಗೂ ಮುಂದಿನ 25 ವರ್ಷಗಳವರೆಗೆ ರಾಜ್ಯಗಳ ನಡುವೆ ಸ್ಥಾನಗಳ ಹಂಚಿಕೆ ಬದಲಾಗದೆ ಇರಬೇಕೆಂದು ಒತ್ತಾಯಿಸಿದೆ (ಏಜೆನ್ಸೀಸ್).