ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್; ಏ. 14ರಂದು ಬಿಹಾರಕ್ಕೆ ನೂತನ ಸಿಎಂ ಘೋಷಣೆ ಸಾಧ್ಯತೆ | CM Nitish Kumar

ಸಿಎಂ ನಿತೀಶ್ ಕುಮಾರ್
ಸಿಎಂ ನಿತೀಶ್ ಕುಮಾರ್
Published on
ನವದೆಹಲಿ: ಬಿಹಾರದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ಮಾರ್ಚ್​ನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್(CM Nitish Kumar), ಇಂದು(ಏ. 10) ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಏ. 14ರಂದು ಬಿಹಾರಕ್ಕೆ ನೂತನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಉಪರಾಷ್ಟ್ರಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಪ್ರಮಾಣವಚನ ಸ್ವೀಕರಿಸಿದ್ದು, ಸಿ.ಪಿ.ರಾಧಕೃಷ್ಣನ್​ ಪ್ರತಿಜ್ಞಾವಿಧಿ ಭೋದಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾಗೆಯೇ ಜೆಡಿಯು ನಾಯಕ ಮತ್ತು ಪಕ್ಷದ ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್, ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಮತ್ತು ಲೋಕಸಭೆಯ ಬಿಜೆಪಿ ಮುಖ್ಯ ಸಚೇತಕ ಸಂಜಯ್ ಜೈಸ್ವಾಲ್ ಕೂಡ ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಅಭಿನಂದನೆ

ಸಿಎಂ ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿತೀಶ್ ಕುಮಾರ್ ಅವರು ದೇಶದ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಉತ್ತಮ ಆಡಳಿತಕ್ಕಾಗಿ ಅವರ ಬದ್ಧತೆಯನ್ನು ಎಲ್ಲೆಡೆ ಪ್ರಶಂಸಿಸಲಾಗಿದೆ. ಬಿಹಾರದ ಅಭಿವೃದ್ಧಿಗೆ ಅವರು ಅಳಿಸಲಾಗದ ಕೊಡುಗೆ ನೀಡಿದ್ದಾರೆ.
ಮತ್ತೊಮ್ಮೆ ಅವರನ್ನು ಸಂಸತ್ತಿನಲ್ಲಿ ನೋಡಲು ತುಂಬಾ ಸಂತೋಷವಾಗುತ್ತದೆ. ಸಂಸತ್ ಸದಸ್ಯರಾಗಿ ಮತ್ತು ಕೇಂದ್ರ ಸಚಿವರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಅವರ ಮುಂಬರುವ ಅವಧಿಗೆ ಶುಭಾಶಯಗಳ ಎಂದು ಶುಭಕೋರಿದ್ದಾರೆ.
ಏ. 14ರಂದು ಬಿಹಾರದಲ್ಲಿ ಎನ್​ಡಿಎ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲಾಗುತ್ತಿದೆ ಎನ್ನಲಾಗಿದೆ. ಕಳೆದ 2025ರ ಚುನಾವಣೆಯಲ್ಲಿ 89 ಶಾಸಕರನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ತನ್ನ ಮುಖ್ಯಮಂತ್ರಿಯನ್ನು ಪ್ರತಿಷ್ಠಾಪಿಸಲಿದೆ. ಡಿಸಿಎಂ ಸಾಮ್ರಾಟ್ ಚೌಧರಿ ಹೆಸರು ಸೇರಿ ಹಲವು ನಾಯಕರು ಸಿಎಂ ರೇಸ್​ನಲ್ಲಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net