

ಲಖನೌ: ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ(ಅ. 26) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ರಾಹುಲ್ ಗಾಂಧಿಯವರ ಕಾರು ಪಾರಾಗಿದ್ದು ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಕ್ಸ್‌ಪ್ರೆಸ್‌ವೇಯ 89.5 ಕಿ.ಮೀ. ಬಳಿ ಈ ಘಟನೆ ನಡೆದಿದೆ. ಪರಸ್ಪರ ಡಿಕ್ಕಿ ಹೊಡೆದ ವಾಹನಗಳು ರಾಹುಲ್ ಗಾಂಧಿ ಕಾರಿನ ಹಿಂದೆ ಪ್ರಯಾಣಿಸುತ್ತಿದ್ದವು ಎನ್ನಲಾಗಿದೆ. ಗಾಯಗೊಂಡವರಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಭದ್ರತಾ ಸಿಬ್ಬಂದಿ ಸೇರಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ಬೆಳಿಗ್ಗೆ 10.15 ರ ಸುಮಾರಿಗೆ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸೇರಿದ ಖಾಸಗಿ ವಾಹನವು ಬೆಂಗಾವಲಿನ ಮುಂಭಾಗದಲ್ಲಿ ಪ್ರಯಾಣಿಸುತ್ತಿದ್ದಾಗ ಅನಿರ್ದಿಷ್ಟ ಕಾರಣಕ್ಕಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಈ ಡಿಕ್ಕಿ ಸಂಭವಿಸಿದೆ. ಇದರಿಂದಾಗಿ ಹಿಂದಿನ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು ಎಂದು ತಿಳಿಸಿದ್ದಾರೆ.
2018ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಆಗಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಸುಲ್ತಾನ್‌ಪುರ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆ ರಾಹುಲ್ ಗಾಂಧಿ ಖುದ್ದು ಕೋರ್ಟ್ಗೆ ಹಾಜರಾಗಲು ಲಕ್ನೋದಿಂದ ಸುಲ್ತಾನ್‌ಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ (ಏಜೆನ್ಸೀಸ್).