ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಗಾಂಧಿ ಜೊತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಚರ್ಚೆ | Jitendra Singh

ರಾಹುಲ್ ಗಾಂಧಿ ಮತ್ತು ಜಿತೇಂದ್ರ ಸಿಂಗ್
ರಾಹುಲ್ ಗಾಂಧಿ ಮತ್ತು ಜಿತೇಂದ್ರ ಸಿಂಗ್
Published on
ನವದೆಹಲಿ: ಸಿಜೆಪಿ ಪ್ರತಿಭಟನಾಕಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸದ ಹೊರಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಹೊಣೆ ಹೊತ್ತು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದೆ.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಪ್ರಧಾನ ಮಂತ್ರಿ ಕಚೇರಿಯ ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್(Jitendra Singh) ಭೇಟಿ ನೀಡಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದು, ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವೊಲಿಸಲು ಮುಂದಾಗಿದ್ದಾರೆ. ಆದರೆ ಕೇಂದ್ರ ಸಚಿವರ ಮನವೊಲಿಕೆಗೆ ಬಗ್ಗ ರಾಹುಲ್ ಗಾಂಧಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಪ್ರತಿಭಟನೆ ಹಿಂಪಡೆಯಲು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮುಂದೆ ಐದು ಬೇಡಿಕೆಯಿಟ್ಟಿದ್ದು, ಮೊದಲನೆಯಾದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಎರಡನೇಯದಾಗಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ಮೂರನೇಯದಾಗಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ನಾಲ್ಕನೇಯದಾಗಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಯಬೇಕು. ಕೊನೆಯದಾಗಿ
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕೆಂದು ಎಂದು ಒತ್ತಾಯಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ. ಮತ್ತು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆಸಿ ವೇಣುಗೋಪಾಲ್, ಪವನ್ ಖೇರಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ದೀಪೇಂದರ್ ಹೂಡಾ, ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದಾರೆ.
ಇದಕ್ಕೂ ಮೊದಲು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದ ರಾಹುಲ್ ಗಾಂಧಿ, ನಿನ್ನೆ ಯುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಅವರಿಂದ ಉತ್ತರಗಳನ್ನು ಕೋರಲು ನಾವು ಪ್ರಧಾನಿ ಮೋದಿಯವರ ಮನೆಗೆ ಮೆರವಣಿಗೆ ನಡೆಸಿದ್ದೇವೆ. ಸರ್ಕಾರ ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಅಥವಾ ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಲು ಬಯಸುತ್ತಿಲ್ಲ. ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದರು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net