ಚು. ಆಯೋಗದಿಂದ ಪ್ರಜಾಪ್ರಭುತ್ವ, ವಿಪಕ್ಷಗಳ ನಾಶಕ್ಕೆ ಯೋಜನೆ ಆರೋಪ: ಎಸ್​ಐಆರ್ ವಿರುದ್ಧ ಬೀದಿಗಿಳಿಯಲು ಮುಂದಾದ Congress

ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ನಡೆದ ಸಭೆ
ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ನಡೆದ ಸಭೆ
Published on

ಪ್ರಮುಖ ಮುಖ್ಯಾಂಶಗಳು

  • ಎಸ್​ಐಆರ್ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ
  • ಡಿಸೆಂಬರ್ ಮೊದಲ ವಾರದಲ್ಲಿ ಬೃಹತ್ ಪ್ರತಿಭಟನೆ ಮಾಡಲು ನಿರ್ಧಾರ
ನವದೆಹಲಿ: ಭಾರತೀಯ ಚುನಾವಣೆ ಆಯೋಗವೂ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳನ್ನು ನಾಶಮಾಡಲು ದುಷ್ಟ ಯೋಜನೆ ರೂಪಿಸಿದೆ ಎಂದು ಮಂಗಳವಾರ(ನ. 18) ಕಾಂಗ್ರೆಸ್(Congress) ಆರೋಪಿಸಿದೆ. ಇದರ ವಿರುದ್ದ ಡಿಸೆಂಬರ್ ಮೊದಲ ವಾರದಲ್ಲಿ ಬೀದಿಗಿಳಿದು ಹೋರಾಟ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ಇಂದು ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಎಸ್‌ಐಆರ್ ನಡೆಯುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (ಯುಟಿ) ಪ್ರಮುಖ ಪದಾಧಿಕಾರಿಗಳೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್, ಮತಗಳ್ಳತನದ ಆರೋಪವನ್ನು ಮುಂದುವರೆಸಿದ್ದು, ಎಸ್​ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ನಡವಳಿಕೆಯೂ ತೀವ್ರ ನಿರಾಶಾದಾಯಕವಾಗಿದೆ. ಮತ್ತು ಉದ್ದೇಶಿತ ಮತಗಳನ್ನು ಅಳಿಸುವ ಗುರಿಯನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಚುನಾವಣಾ ಆಯೋಗದ ಉದ್ದೇಶ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳನ್ನು ನಾಶಮಾಡುವುದಾಗಿದೆ, ಇದು ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ. ನಾವು ಬೀದಿಗಿಳಿಯುತ್ತಿದ್ದೇವೆ. ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷವು ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿಯನ್ನು ಆಯೋಜಿಸುತ್ತಿದೆ. ಲಕ್ಷಾಂತರ ಜನರು ಇದರಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಮೂಲಕ ಕಾಂಗ್ರೆಸ್ ಆಯೋಗದ ಪಿತೂರಿಯನ್ನು ಬಯಲು ಮಾಡುತ್ತದೆ ಎಂದು ಹೇಳಿದ್ದಾರೆ.
ಇನ್ನೂ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಮತ ಚೋರಿಗಾಗಿ ಮತದಾರರ ಪಟ್ಟಿ ಪ್ರಕ್ರಿಯೆಯನ್ನು ಆಯುಧವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net