ನವದೆಹಲಿ: ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಈ ನಡುವೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡುವ ಬ್ಲ್ಯಾಂಕ್ ಚೆಕ್ ಎಂದು ಕರೆದಿರುವ ಅವರು, ಇದು ಭಾರತೀಯ ಪ್ರಜಾಪ್ರಭುತ್ವದ ಸಾವಿಗೆ ದಾರಿಯಾಗಲಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇಂಡಿಯಾ ಮೈತ್ರಿಕೂಟದೊಳಗೆ ಈ ಮಸೂದೆ ವಿಚಾರವಾಗಿ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿರುವ ನಡುವೆಯೇ ರಾಹುಲ್ ಗಾಂಧಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಡಿಎಂಕೆ ಪಕ್ಷದ ನಿಲುವಿನ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮೈತ್ರಿಕೂಟದ ಪಕ್ಷಗಳು ಮಸೂದೆಯನ್ನು ಬೆಂಬಲಿಸಿದರೂ ಮೈತ್ರಿಯೊಳಗಿನ ಅವುಗಳ ಸ್ಥಾನಮಾನ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕ್ಷೇತ್ರ ಮರುವಿಂಗಡಣೆ ವಿಚಾರವನ್ನು ಕೇವಲ ರಾಜಕೀಯ ವಿವಾದವಾಗಿ ನೋಡಬಾರದು. ಇದು ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಟಿಡಿಪಿ ಸೇರಿದಂತೆ ಎಲ್ಲ ಪಕ್ಷಗಳು ದೇಶದ ಹಿತದೃಷ್ಟಿಯಿಂದ ಯೋಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಅವರು ಒಂದು ದಿನ ಸೋಲುವುದು ಖಚಿತ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಯಾರು ರಕ್ಷಿಸುತ್ತಿದ್ದಾರೆ ಮತ್ತು ಯಾರು ಅದಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಆಂಧ್ರಪ್ರದೇಶದ ನಾಯಕರಾದ ಜಗನ್ ಮೋಹನ್ ರೆಡ್ಡಿ ಮತ್ತು ಚಂದ್ರಬಾಬು ನಾಯ್ಡು ಅವರನ್ನೂ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ. ದಯವಿಟ್ಟು ಎಚ್ಚೆತ್ತುಕೊಳ್ಳಿ ಎಂದು ಕರೆ ನೀಡಿದ್ದಾರೆ.
ಪ್ರಸ್ತಾವಿತ ಮಸೂದೆಯ ಪ್ರಕಾರ ಲೋಕಸಭೆಯ ಗರಿಷ್ಠ ಚುನಾಯಿತ ಸದಸ್ಯರ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಉದ್ದೇಶವಿದೆ. ಇದರಲ್ಲಿ ರಾಜ್ಯಗಳಿಂದ 815 ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 35 ಸದಸ್ಯರನ್ನು ಆಯ್ಕೆ ಮಾಡುವ ಪ್ರಸ್ತಾವನೆ ಇದೆ. ಪ್ರಸ್ತುತ ಲೋಕಸಭೆಯ ಚುನಾಯಿತ ಸದಸ್ಯರ ಬಲ 543 ಆಗಿದೆ.
ಸಂವಿಧಾನದ 132ನೇ ತಿದ್ದುಪಡಿ ಮಸೂದೆ, 2026 ಮತ್ತು ಕ್ಷೇತ್ರ ಮರುವಿಂಗಡಣೆ (ಎರಡನೇ) ಮಸೂದೆ, 2026ರ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಲೋಕಸಭೆ ಸ್ಥಾನಗಳನ್ನು ಶೇ.50ರಷ್ಟು ಹೆಚ್ಚಿಸುವ ಮೂಲಕ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಮಹಿಳಾ ಸಬಲೀಕರಣ ಮತ್ತು ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಆದರೆ, ಕಾಂಗ್ರೆಸ್ ಈ ಪ್ರಸ್ತಾವನೆಯನ್ನು ವಿರೋಧಿಸುತ್ತಿದೆ. 850 ಸ್ಥಾನಗಳ ಅಗತ್ಯವಿಲ್ಲ, ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಈಗಿರುವ 543ರಲ್ಲೇ ಉಳಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಜೊತೆಗೆ ಜಾತಿ ಗಣತಿ ನಡೆಸಲು ಮತ್ತು ಎಲ್ಲ ಪಕ್ಷಗಳ ಪ್ರತಿನಿಧಿಗಳಿರುವ ದ್ವಿಪಕ್ಷೀಯ ಆಯೋಗ ರಚಿಸಲು ತಮ್ಮ ಪಕ್ಷ ಸಿದ್ಧವಿದೆ ಎಂದಿದ್ದಾರೆ.
ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮುಂದಿಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಈಗಾಗಲೇ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ಹೀಗಿರುವಾಗ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ನಮಗೆ 850 ಸ್ಥಾನಗಳ ಮಸೂದೆ ಬೇಕಾಗಿಲ್ಲ. ಮಹಿಳಾ ಮೀಸಲಾತಿಯನ್ನು ಈಗಿರುವ 543 ಸ್ಥಾನಗಳಲ್ಲೇ ಜಾರಿಗೊಳಿಸಿ. ಅದಕ್ಕೆ ನಮ್ಮ ಬೆಂಬಲವಿದೆ. ಆದರೆ 850 ಸ್ಥಾನಗಳ ಪ್ರಸ್ತಾವನೆಯು ಚುನಾವಣಾ ಕ್ಷೇತ್ರಗಳನ್ನು ಮರುರೂಪಿಸುವ ಮತ್ತು ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದೆ' ಎಂಬುದು ಅವರ ವಾದ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ರಾಹುಲ್ ಗಾಂಧಿ, ದೇಶದಲ್ಲಿ ಬಿಜೆಪಿಯ ವಿರುದ್ಧ ದೊಡ್ಡ ಮಟ್ಟದ ಜನಾಭಿಪ್ರಾಯ ರೂಪುಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಕ್ಷೇತ್ರ ಮರುವಿಂಗಡಣೆ ಮಾಡಿ, ಲೋಕಸಭೆ ಸ್ಥಾನಗಳನ್ನು 850ಕ್ಕೆ ಹೆಚ್ಚಿಸಿದರೂ ಜನರ ಆಕ್ರೋಶವನ್ನು ತಡೆಯಲು ಸಾಧ್ಯವಿಲ್ಲ. ಬಿಜೆಪಿಗೆ ಒಂದು ದಿನ ಸೋಲು ಎದುರಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮೀಸಲಾತಿ, ಜಾತಿ ಗಣತಿ, ಲೋಕಸಭೆ ಸ್ಥಾನಗಳ ಹೆಚ್ಚಳ ಮತ್ತು ಕ್ಷೇತ್ರ ಮರುವಿಂಗಡಣೆ ವಿಚಾರಗಳು ಇದೀಗ ರಾಷ್ಟ್ರ ರಾಜಕಾರಣದ ಪ್ರಮುಖ ಚರ್ಚೆಯಾಗಿ ಮಾರ್ಪಟ್ಟಿವೆ. ಈ ಮಸೂದೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.