ಸಾಮಾಜಿಕ ಜಾಲತಾಣದ ಈ ಭಾಷಣದ ಬೆನ್ನಲ್ಲೇ, ಶುಕ್ರವಾರ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ಪರೀಕ್ಷಾ ಪತ್ರಿಕೆ ಸೋರಿಕೆ ತಡೆ ಕಾಯ್ದೆಯ ತಿದ್ದುಪಡಿಗಳಿಗೆ ಅನುಮೋದನೆ ನೀಡಿದ್ದು, ಪರೀಕ್ಷಾ ಅಕ್ರಮಗಳಿಗೆ ಇನ್ಮುಂದೆ ಅತ್ಯಂತ ಕಠಿಣ ಶಿಕ್ಷೆಗಳನ್ನು ಪ್ರಸ್ತಾಪಿಸಿದೆ. ಪರಿಷ್ಕೃತ ಕಾಯ್ದೆಯಡಿ, ಅಕ್ರಮ ಎಸಗುವ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿಯವರೆಗೆ ದಂಡ ವಿಧಿಸಬಹುದಾಗಿದೆ. ಜೊತೆಗೆ ಕನಿಷ್ಠ ಜೈಲು ಶಿಕ್ಷೆಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಕ್ಕೆ ಏರಿಕೆ ಮಾಡಲಾಗಿದೆ.