ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾದ ಕೆಎಸ್ಆರ್ಟಿಸಿ ಬಸ್: ಐವರು ಸಾವು, 10 ಮಂದಿಗೆ ಗಾಯ | KSRTC bus
ಘಟನೆಯ ಸ್ಥಳ
Published on:
Copied
Follow Us
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ನಲ್ಲಿ ಮಂಗಳವಾರ ಬೆಳಗ್ಗೆ(ಮೇ 12) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(KSRTC) ಬಸ್ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೀದರ್-ಜಹೀರಾಬಾದ್ ರಸ್ತೆಯಲ್ಲಿ ಘಟನೆ ನಡೆದಿದೆ. ಬಸ್ಸು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರ ಜೊತೆಗೆ ಇಬ್ಬರು ಮೋಟಾರ್ ಸೈಕಲ್ ಸವಾರರು ತಕ್ಷಣವೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಜನರು ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. 10 ಮಂದಿಗೆ ಗಂಭೀರ ಗಾಯವಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ, ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೀಡಾದ ಬಸ್ ಹೈದರಾಬಾದ್ ನಿಂದ ಬೀದರ್ ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ (ಏಜೆನ್ಸೀಸ್).