ನಂದಿಗ್ರಾಮ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್ | Milan Pradhan

ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್
ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್
Published on: 
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 19 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ನಂದಿಗ್ರಾಮ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್(Milan Pradhan) ಅವರಿಗೆ, ಶನಿವಾರ(ಸೆ. 19) ನ್ಯಾಯಾಲಯವು, ಅಕ್ಟೋಬರ್​ 03ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ ಎಂದು ವರದಿಯಾಗಿದೆ.
ನಂದಿಗ್ರಾಮದಲ್ಲಿ 2007ರ ಭೂಸ್ವಾಧೀನ ವಿರೋಧಿ ಚಳವಳಿಯ ಸಂದರ್ಭದಲ್ಲಿ ದಾಖಲಾದ ಗಲಭೆ, ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಮುಂತಾದ ಜಾಮೀನು ರಹಿತ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಾಕಿ ಉಳಿದಿದ್ದ ನಾಲ್ಕು ಬಂಧನ ವಾರಂಟ್‌ಗಳ ಆಧಾರದ ಮೇಲೆ ಪ್ರಧಾನ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.
ಪ್ರಧಾನ್ ಅವರನ್ನು ಇಂದು ಹಲ್ದಿಯಾ ಸಬ್‌ಡಿವಿಷನಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಧಾನ್ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಮತ್ತು ಪೊಲೀಸರಿಗೆ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯದಲ್ಲಿ ವಾದಿಸಿತು.
ಬಳಿಕ ನ್ಯಾಯಾಲಯವು, ನಂದಿಗ್ರಾಮ ಪೊಲೀಸ್ ಠಾಣೆಯಲ್ಲಿನ ಪ್ರಕರಣಗಳಿಗೆ ಸಂಬಂಧಿಸಿದ ಮೂರು ವಾರಂಟ್‌ಗಳಿಗೆ ಸಂಬಂಧಿಸಿದಂತೆ ಮಿಲನ್ ಪ್ರಧಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇನ್ನೂ ಖೇಜುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಹೊರಡಿಸಲಾದ ನಾಲ್ಕನೇ ವಾರಂಟ್‌ಗೆ ಸಂಬಂಧಿಸಿದಂತೆ ಸೋಮವಾರ ಅವರನ್ನು ಕೊಂಟೈ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.
ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ಸ್ಪರ್ಧೆಯಿಂದ ಹಿಂದೆ ಸರಿದ ನಂತರ, ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದರು. ಬಳಿಕ ಮಿಲನ್ ಪ್ರಧಾನ್ ಅವರನ್ನು ಬಂಧನ ಮಾಡಲಾಗಿತ್ತು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net