NEET ವೈಫಲ್ಯ ಕೇವಲ ಆಡಳಿತಾತ್ಮಕ ಹಿನ್ನಡೆಯಲ್ಲ, ವಿದ್ಯಾರ್ಥಿಗಳಿಗೆ ಬಗೆದ ದ್ರೋಹ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ | Siddaramaiah

Siddaramaiah | ಮುಖ್ಯಮಂತ್ರಿ ಸಿದ್ದರಾಮಯ್ಯ
Siddaramaiah | ಮುಖ್ಯಮಂತ್ರಿ ಸಿದ್ದರಾಮಯ್ಯ
Published on
ಬೆಂಗಳೂರು: ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಕೇವಲ ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಸಿಎಂ, ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ ಒಟ್ಟು 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಈ ಒಂದು ನಿರ್ಧಾರವು ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.
ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನಮ್ಮ ಸರ್ಕಾರವು 2024ರಲ್ಲೇ ಸದನದಲ್ಲಿ ನಿರ್ಣಯ ಕೈಗೊಂಡಿತ್ತು. ಅಂದಿನ ನಮ್ಮ ಕಾಳಜಿ ಎಷ್ಟು ಸತ್ಯ ಮತ್ತು ಅನಿವಾರ್ಯವಾಗಿತ್ತು ಎನ್ನುವುದನ್ನು ಇಂದಿನ ಪರೀಕ್ಷಾ ರದ್ದತಿಯು ಸಾಬೀತುಪಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ನಡೆಯುತ್ತಿರುವ ಪೇಪರ್ ಲೀಕ್ ಪ್ರಕರಣಗಳು, ಪ್ರತಿಭಾವಂತ ವಿದ್ಯಾರ್ಥಿಗಳ ಹಿತರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಎಷ್ಟರಮಟ್ಟಿಗೆ ವೈಫಲ್ಯ ಕಂಡಿದೆ ಎಂಬುದಕ್ಕೆ ಸಾಕ್ಷಿಯಾಗಿವೆ. ಈ ವೈಫಲ್ಯದ ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.
ಈ ಬಗ್ಗೆ ಪಾರದರ್ಶಕ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಹಾಗೂ ಇಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂಬುದು ನಮ್ಮ ಒತ್ತಾಯವಾಗಿದ್ದು, ಪೇಪರ್ ಲೀಕ್‌ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ಅವರ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net