ಕೇಂದ್ರ ಸಚಿವ ಸಂಪುಟವು ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಕರಡು ವಿಧೇಯಕಕ್ಕೆ ಅಂಕಿತ ಹಾಕಿದ ಬೆನ್ನಲ್ಲೇ ಎನ್‌ಟಿಎ ಈ ಕ್ರಮ ಕೈಗೊಂಡಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ದೊರೆತಿದ್ದು, ಮುಂದಿನ ವಾರ ಇದನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.
ಈ ವಿಧೇಯಕವು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024ಕ್ಕೆ ತಿದ್ದುಪಡಿ ತರಲಿದ್ದು, ಸಂಘಟಿತ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿವರೆಗೆ ದಂಡ ವಿಧಿಸುತ್ತದೆ. ಈ ಕರಡು ವಿಧೇಯಕದ ಕುರಿತು ಪ್ರಧಾನಿ ಮೋದಿ ತಡರಾತ್ರಿ ವೀಡಿಯೋ ಮೂಲಕ ಭರವಸೆ ನೀಡಿದ್ದರು. ಪೇಪರ್ ಲೀಕ್ ಘಟನೆಗಳು ಅತ್ಯಂತ ನೋವಿನ ಸಂಗತಿ ಎಂದಿದ್ದ ಪ್ರಧಾನಿಗಳು, ಇದು ಸಣ್ಣ ವಿಷಯವಲ್ಲ ಎಂಬುದು ತಮಗೆ ತಿಳಿದಿದೆ ಎಂದಿದ್ದರು.
ಸಚಿವ ಸಂಪುಟವು ಶುಕ್ರವಾರ ಪತ್ರಿಕೆ ಸೋರಿಕೆ ವಿಷಯದ ಕುರಿತು ಚರ್ಚಿಸಲಿದ್ದು, ಸಚಿವ ಸಂಪುಟದ ಸಹೋದ್ಯೋಗಿಗಳ ಸಲಹೆಗಳನ್ನು ಪಡೆದು ಮುಂದಿನ ಕ್ರಮವನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದ ಪ್ರಧಾನಿ ಮೋದಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅಪರಾಧಿಗಳನ್ನು ಬಂಧಿಸಲಾಗಿದೆ. ಅವರು ಈಗ ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಅತ್ಯಂತ ಪ್ರಮುಖ ಜವಾಬ್ದಾರಿಯಾಗಿತ್ತು. ತಕ್ಷಣವೇ ಪರೀಕ್ಷೆ ನಡೆಸುವುದು ಅಗತ್ಯವಾಗಿತ್ತು. ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು, 22 ಲಕ್ಷ ವಿದ್ಯಾರ್ಥಿಗಳು ಮರುಪರೀಕ್ಷೆಗೆ ಹಾಜರಾಗುವುದನ್ನು ಸರ್ಕಾರ ಖಚಿತಪಡಿಸಿದೆ ಎಂದು ಮೋದಿ ತಿಳಿಸಿದ್ದರು(ಏಜೆನ್ಸೀಸ್).