

ಪಶ್ಚಿಮ ಬಂಗಾಳ: ಕೋಲ್ಕತದ ದುರ್ಗಾ ಪೂಜಾ ಮಂಟಪದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕನಿಷ್ಠ 17 ಮಂದಿ ಭಕ್ತರು ದಾರುಣವಾಗಿ ಮೃತಪಟ್ಟಿದ್ದು, 13 ಮಹಿಳೆಯರು, ಓರ್ವ ಮಗು ಜೀವ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ಘಟನೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
"ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಅತ್ಯಂತ ದುಃಖಕರ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜತೆಯಲ್ಲಿವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ" ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿರುವ ಪ್ರಧಾನಿ, ಗಾಯಾಳುಗಳಿಗೆ ತಲಾ 50 ಸಾವಿರ ರೂ. ಹಣವನ್ನು ಪರಿಹಾರ ರೂಪದಲ್ಲಿ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಕೋಲ್ಕತದ ಚೋರೆ ಬಗಾನ್ ಸರ್ಬಜನೀನ್ ದುರ್ಗಾ ಪೂಜಾ ಪಂಡಲ್ನಲ್ಲಿ ಹೆಚ್ಚಿನ ಜನಸಂದಣಿ ಸೇರಿದ ಪರಿಣಾಮ, ಭಕ್ತರು ದೇವರ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಈ ವೇಳೆ, ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲ ತಕ್ಷಣವೇ ಎಂಸಿಎಚ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಹಲವರು ಪ್ರಜ್ಞೆ ತಪ್ಪಿ ಕೆಳಕ್ಕೆ ಬಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾಲ್ತುಳಿತ ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬೈಕ್ ಮತ್ತು ಆಟೋಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.
ಈ ದುರ್ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಸುವೆಂದು ಅಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿ ಮನೋಜ್ ಅಗರ್ವಾಲ್, ಖುದ್ದಾಗಿ ಆಸ್ಪತ್ರೆಗೆ ಭೇಟಿ ಕೊಟ್ಟು ಮೃತ ಭಕ್ತರು ಕುಟುಂಬಸ್ಥರನ್ನು ಮತ್ತು ಗಾಯಾಳುಗಳನ್ನು ಮಾತನಾಡಿಸಿದ್ದಾರೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, ಕಾಲ್ತುಳಿತ ದುರಂತಕ್ಕೆ ಅತೀವ ಬೇಸರ ಹೊರಹಾಕಿದ್ದಾರೆ.