

ನವದೆಹಲಿ: ಎಸ್ಐಆರ್ ಕುರಿತು ಭಾರತೀಯ ಚುನಾವಣೆ ಆಯೋಗದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಕುರಿತಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಮುಗಿಬಿದ್ದಿರುವ ಇಂಡಿಯಾ ಮೈತ್ರಿಕೂಟದ ನಾಯಕರು ಸೆ. 30ರಂದು ಮಹತ್ವ ಸಭೆ ಕರೆದಿದ್ದು, ಹಲವು ವಿಚಾರಗಳ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಶಿವಸೇನೆ ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂಎ ಬೇಬಿ ಮತ್ತು ಇತರರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಎಸ್ಐಆರ್ ಕುರಿತು ಚುನಾವಣಾ ಆಯೋಗ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಸ್ವತಂತ್ರ ತನಿಖೆ, ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಸೇರಿದಂತೆ ದೇಶಾದ್ಯಂತ ಕೈಗೊಳ್ಳಬೇಕಾದ ಪ್ರತಿಭಟನೆಗಳು ಮತ್ತು ಆಂದೋಲನಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಈಗಾಗಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂಎ ಬೇಬಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಕನಿಷ್ಠ 14 ಸಂದರ್ಭಗಳಲ್ಲಿ ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ ಎಂದು ಇತ್ತೀಚಿಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಬಳಿಕ ವಿವಾದ ಏರ್ಪಟ್ಟಿದೆ.
ಆದರೆ ಇಂದು(ಸೆ. 26) ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಚುನಾವಣೆ ಆಯೋಗವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯೋಗದೊಳಗೆ ಭಿನ್ನಾಭಿಪ್ರಾಯಗಳಿದ್ದವು ಎಂಬ ಊಹಾಪೋಹಗಳನ್ನು ತಳ್ಳಿಹಾಕಿದೆ. ಮತ್ತು ಈ ಕುರಿತಾದ ಪ್ರಮುಖ ನಿರ್ಧಾರಗಳನ್ನು ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ (ಏಜೆನ್ಸೀಸ್).