

ನವದೆಹಲಿ/ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case ) ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಭಾರಿ ಶಾಕ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, ಮುಂದಿನ ಎರಡು ವಾರಗಳ ಒಳಗಾಗಿ ಶರಣಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
2016ರ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಜುಲೈ ತಿಂಗಳಲ್ಲಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಆದರೆ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಮಹತ್ವದ ತೀರ್ಪು ಪ್ರಕಟಿಸಿದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಾಗ ಕಾನೂನು ತತ್ವಗಳನ್ನು ಪಾಲಿಸಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳಲ್ಲಿ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಆದೇಶಿಸಿರುವುದರಿಂದ ಅವರಿಗೆ ಮತ್ತೆ ಜೈಲು ಸೇರುವುದು ಅನಿವಾರ್ಯವಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣವು ಕರ್ನಾಟಕ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಘಟನೆಯಾಗಿದೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಕೊಲೆಗೆ ರಾಜಕೀಯ ದ್ವೇಷವೇ ಮುಖ್ಯ ಕಾರಣ ಎಂಬ ಆರೋಪಗಳು ಆರಂಭದಿಂದಲೂ ಕೇಳಿಬಂದಿದ್ದವು.
ಈ ಪ್ರಕರಣದ ಪ್ರಮುಖ ತಿರುವು ಎಂದರೆ ಕಾಂಗ್ರೆಸ್ ಪ್ರಭಾವಿ ನಾಯಕ ವಿನಯ್ ಕುಲಕರ್ಣಿ ಅವರ ಬಂಧನ. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು, ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ (CBI) ತನಿಖೆಗೆ ವಹಿಸಲಾಯಿತು. ಸಿಬಿಐ ತನಿಖೆಯ ವೇಳೆ ವಿನಯ್ ಕುಲಕರ್ಣಿ ಅವರು ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಉಲ್ಲೇಖಿಸಿ, 2020ರಲ್ಲಿ ಅವರನ್ನು ಬಂಧಿಸಲಾಯಿತು. ಸುಮಾರು ಒಂಬತ್ತು ತಿಂಗಳುಗಳ ಕಾಲ ಅವರು ಜೈಲು ಶಿಕ್ಷೆ ಅನುಭವಿಸಿದ್ದರು.
ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಪ್ರಕಾರ, ಯೋಗೀಶ್ ಗೌಡ ಮತ್ತು ವಿನಯ್ ಕುಲಕರ್ಣಿ ನಡುವೆ ಜಮೀನು ವಿಚಾರ ಹಾಗೂ ರಾಜಕೀಯ ಪ್ರಾಬಲ್ಯಕ್ಕೆ ಸಂಬಂಧಿಸಿದಂತೆ ತೀವ್ರ ಭಿನ್ನಾಭಿಪ್ರಾಯಗಳಿದ್ದವು. ಇದೇ ದ್ವೇಷದಿಂದಾಗಿ ಯೋಗೀಶ್ ಗೌಡ ಅವರನ್ನು ಹತ್ಯೆ ಮಾಡಲು ವಿನಯ್ ಕುಲಕರ್ಣಿ ಸುಪಾರಿ ನೀಡಿದ್ದರು ಮತ್ತು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂಬ ಗಂಭೀರ ಆರೋಪಗಳನ್ನು ಹೊರಿಸಲಾಯಿತು.
ಈ ಘಟನೆಗೆ ಮುನ್ನ ಮತ್ತು ಘಟನೆ ನಂತರ ವಿನಯ್ ಕುಲಕರ್ಣಿ ದೆಹಲಿಗೆ ಪ್ರವಾಸ ಮಾಡಿದ್ದರು. ಘಟನೆ ವೇಳೆ ತಾನು ಜಿಲ್ಲಾ ಕೇಂದ್ರದಲ್ಲಿ ಇರಲೇ ಇಲ್ಲ. ರಾಜಧಾನಿ ಮತ್ತು ದೆಹಲಿ ಮಧ್ಯೆ ಪ್ರವಾಸ ಮಾಡುತ್ತಾ ಏನೋ ಪ್ರಮುಖ ಕೆಲಸದಲ್ಲಿ ತೊಡಗಿಕೊಂಡಿದ್ದೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪವಿದೆ. 2016ರ ಜೂ. 12ರಂದು ದೆಹಲಿಗೆ ತೆರಳಿದ್ದ ಕುಲಕರ್ಣಿ 13ರಂದು ಬೆಂಗಳೂರಿಗೆ ವಾಪಸಾಗಿದ್ದರು. ಜೂ. 16ರಂದು ಪುನಃ ದೆಹಲಿಗೆ ತೆರಳಿ 18ರಂದು ರಾಜಧಾನಿಗೆ ವಾಪಸಾಗಿದ್ದರು. ಪ್ರಯಾಣದ ದಿನವೇ ವಿಮಾನ ಟಿಕೆಟ್ ಪಡೆಯಲಾಗಿತ್ತು ಎಂಬುದನ್ನು ಸಿಬಿಐ ದಾಖಲೆ ಸಹಿತವಾಗಿ ಖಚಿತ ಪಡಿಸಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು.
ಸಿಬಿಐ ತನಿಖೆಯ ನಂತರ 2020ರಲ್ಲಿ ಬಂಧನವಾಗಿ ಜೈಲು ಸೇರಿದ ವಿನಯ್ ಕುಲಕರ್ಣಿ ಅವರು, 2021ರ ಆಗಸ್ಟ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದರು. ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಆರೋಪದ ಮೇಲೆ ಸಿಬಿಐ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇದಾದ ಬಳಿಕ 2025ರ ಜೂನ್ 6ರಂದು ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿತು. ಅದರಂತೆ ಜೂನ್ 14ರಂದು ವಿನಯ್ ಕುಲಕರ್ಣಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಶರಣಾದರು.
ಇನ್ನು, ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳ ಪೈಕಿ 17 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, 2026ರ ಏಪ್ರಿಲ್ 17ರಂದು 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿತು. ಇದರ ಬೆನ್ನಲ್ಲೇ ವಿನಯ್ ಕುಲಕರ್ಣಿ ಸೇರಿದಂತೆ ಇತರೆ ಆರೋಪಿಗಳು ಶಿಕ್ಷೆಯನ್ನು ರದ್ದು ಮಾಡಿ, ಜಾಮೀನು ನೀಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ವಿನಯ್ ಕುಲಕರ್ಣಿ ಅವರ ವಿರುದ್ಧದ ಆದೇಶವನ್ನು ಅಮಾನತ್ತಿನಲ್ಲಿಟ್ಟು, ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಅದೇ ಆದೇಶದಂತೆ ಇತರ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿತು. ಆದರೆ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಮಹತ್ವದ ತೀರ್ಪು ಪ್ರಕಟಿಸಿದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಾಗ ಕಾನೂನು ತತ್ವಗಳನ್ನು ಪಾಲಿಸಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳಲ್ಲಿ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಆದೇಶಿಸಿರುವುದರಿಂದ ಅವರಿಗೆ ಮತ್ತೆ ಜೈಲು ಸೇರುವುದು ಅನಿವಾರ್ಯವಾಗಿದೆ.