ಅಚ್ಚರಿ ಫಲಿತಾಂಶ, ಆರಂಭದಿಂದಲೇ ಚುನಾವಣೆ ನ್ಯಾಯಯುತವಾಗಿಲ್ಲ; ಸೋಲಿನ ಬಗ್ಗೆ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Published on
ನವದೆಹಲಿ: ಬಿಹಾರ ಚುನಾವಣೆ ಮುಗಿದಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಇಂಡಿಯಾ ಮೈತ್ರಿಕೂಟ ಹೀನಾಯವಾಗಿ ಸೋಲನ್ನೊಪ್ಪಿಕೊಂಡಿದೆ. ಈ ಕುರಿತು ಪ್ರತಿಕ್ರಿಯೆ ಮೊದಲ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಫಲಿತಾಂಶ ಅಚ್ಚರಿ ತಂದಿದೆ. ಆರಂಭದಿಂದಲೂ ಚುನಾವಣೆ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಹಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಘಾತಕಾರಿ. ಆರಂಭದಿಂದಲೂ ಚುನಾವಣೆ ನ್ಯಾಯಯುತವಾಗಿರಲಿಲ್ಲ. ಈ ಹಿನ್ನೆಲೆ ಗೆಲುವು ಸಾಧಿಸುವಲ್ಲಿ ನಾವು ವಿಫಲರಾಗಿದ್ದೇವೆ.
ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರು ಈ ಫಲಿತಾಂಶವನ್ನು ಆಳವಾಗಿ ಪರಿಶೀಲಿಸುತ್ತವೆ, ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತವೆ ಎಂದು ಹೇಳಿದ್ದಾರೆ.
ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಾವು ಬಿಹಾರದ ಜನರ ನಿರ್ಧಾರವನ್ನು ಗೌರವಿಸುತ್ತೇವೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಲ್ಲಿ ತೊಡಗಿರುವ ಶಕ್ತಿಗಳ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ಚುನಾವಣಾ ಫಲಿತಾಂಶಗಳ ಸಂಪೂರ್ಣ ಅಧ್ಯಯನವನ್ನು ನಡೆಸುತ್ತೇವೆ. ಬಳಿಕ ವಿವರವಾದ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.
2020ರ ಚುನಾವಣೆಯಲ್ಲಿ 70 ಕ್ಷೇತ್ರದಲ್ಲಿ ಸ್ಪರ್ಧಿಸಿದ 19 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, ಈ ಬಾರಿ 61 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆರ್​ಜೆಡಿ ಕಳೆದ ಬಾರಿ 144 ಸ್ಥಾನಗಳಲ್ಲಿ ಸ್ಪರ್ಧಿಸಿ 75 ಸ್ಥಾನಗಳಲ್ಲಿ ಗೆದ್ದಿತ್ತು. ಆದರೆ ಈ ಬಾರಿ ಅದು ಕೂಡ ಕೇವಲ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net